ಕಾನೂನು ಅರಿವಿದ್ದರೆ ದೌರ್ಜನ್ಯದಿಂದ ಮುಕ್ತರಾಗಬಹುದು

| Published : Jan 19 2025, 02:17 AM IST

ಸಾರಾಂಶ

ಚಾಮರಾಜನಗರ ತಾಲೂಕಿನ ರಂಗಸಂದ್ರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಈಶ್ವರ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಸ್ತುತ ಮಕ್ಕಳ ಬಗ್ಗೆ ಸಾಕಷ್ಟು ಕಾಯ್ದೆಗಳು ಜಾರಿಯಲ್ಲಿದ್ದು ಕಾನೂನುಗಳ ಬಗ್ಗೆ ಮಾಹಿತಿ ಪಡೆಯುವ ಮೂಲಕ ದೌರ್ಜನ್ಯದಿಂದ ಮುಕ್ತರಾಗಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಈಶ್ವರ ಅವರು ತಿಳಿಸಿದರು. ತಾಲೂಕಿನ ರಂಗಸಂದ್ರದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಆಸರೆ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನದಲ್ಲಿ ಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದ್ದು ಬಾಲ ನ್ಯಾಯ ಪಾಲನೆಯ ಕಾಯ್ದೆ ಪ್ರಕಾರ ಮಕ್ಕಳಿಗೆ ಬದುಕುವ, ರಕ್ಷಣೆ ಹೊಂದುವ, ಭಾಗವಹಿಸುವ, ವಿಕಾಸ ಹೊಂದುವ ಹಕ್ಕು ನೀಡಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರು ಜಾಗೃತಿ ಹೊಂದಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ತಕ್ಷಣ ಮಕ್ಕಳ ಸಹಾಯವಾಣಿ ೧೦೯೮ ಕರೆ ಮಾಡಿ ಮಕ್ಕಳ ರಕ್ಷಣೆಗೆ ಎಲ್ಲರೂ ಸಹಕರಿಸಬೇಕು ಎಂದರು.

ವಿದ್ಯಾರ್ಥಿಗಳು ಓದಿನ ಸಮಯದಲ್ಲಿ ವ್ಯಾಸಂಗಕ್ಕೆ ಹೆಚ್ಚು ಒತ್ತು ನೀಡಬೇಕು. ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಪೋಷಕರಿಗೆ, ಗುರು ಹಿರಿಯರಿಗೆ ಒಳ್ಳೆಯ ಹೆಸರು ತರಬೇಕು. ಮಕ್ಕಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆ ಜಾರಿಯಲ್ಲಿದ್ದು ಈ ಪ್ರಕಾರ ಮಕ್ಕಳನ್ನು ಲೈಂಗಿಕವಾಗಿ ಬಳಸಿ ಕೊಳ್ಳುವವರ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಬಾಲಕಾರ್ಮಿಕ ಪದ್ಧತಿ ಕಾಯ್ದೆ ಜಾರಿಯಲ್ಲಿದ್ದು ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ಸೇರಿಸಿಕೊಳ್ಳಬಾರದೆಂದು ಕಾಯ್ದೆ ಹೇಳುತ್ತದೆ. ಬಾಲ್ಯವಿವಾಹ ಕಾಯ್ದೆ ಬಗ್ಗೆಯೂ ಸಹ ಪ್ರತಿಯೊಬ್ಬರು ಮಾಹಿತಿಯನ್ನು ಪಡೆಯಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ೨೦೧೬ರಲ್ಲಿ ತಿದ್ದುಪಡಿಯಾಗಿದೆ. ೧೮ ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ದುಡಿಮೆಗೆ ಬಳಸಿಕೊಳ್ಳುವಂತಿಲ್ಲ. ಮಕ್ಕಳನ್ನು ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ೨೦,೦೦೦ ದಿಂದ ೫೦,೦೦೦ ರು.ವರೆಗೆ ದಂಡ ಹಾಗೂ ಜೈಲುವಾಸ ವಿಧಿಸಲು ಅವಕಾಶವಿದೆ ಎಂದರು.

ಮಕ್ಕಳು ಶಾಲಾ ಅವಧಿಯಲ್ಲಿ ಕೆಲಸ ನಿರ್ವಹಿಸುವುದು ಕಂಡು ಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಲು ಸಹಕಾರ ನೀಡಬೇಕೆಂದರು.

ಆಸರೆ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ.ಸುರೇಶ್ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ನೀಡುವ ಮೂಲಕ ಪೋಷಕರು ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಹೆಣ್ಣುಮಕ್ಕಳು ವಿದ್ಯಾವಂತರಾದರೆ ಅವರಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ಹೆಣ್ಣು ಮಕ್ಕಳು ವಿದ್ಯಾವಂತರಾದರೆ ಇಡೀ ಕುಟುಂಬ ಶಿಕ್ಷಣ ಪಡೆಯುತ್ತದೆ. ಜೊತೆಗೆ ಕಾನೂನು ತಿಳಿದುಕೊಳ್ಳುವುದರಿಂದ ದೌರ್ಜನ್ಯಗಳನ್ನು ತಡೆಗಟ್ಟಬಹುದು ಎಂದರು.

ವಸತಿ ಶಾಲೆಯ ಪ್ರಾಂಶುಪಾಲ ಎಂ.ಜೆ ವಿಲಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ದೀಪಿಕಾ, ಶ್ರೀಕಾಂತ, ಶಂಕರ್, ವಿದ್ಯಾ, ರೂಪಶ್ರೀ, ಜಯಶ್ರೀ, ರೇಖಾ, ಧನಲಕ್ಷ್ಮಿ, ಶ್ವೇತಾ, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.