ಕುಷ್ಟಗಿ ಪಟ್ಟಣದ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಕಾರ್ಯಚಟುವಟಿಕೆ, ವೈದ್ಯಕೀಯ ಸೇವೆಗಳು ಹಾಗೂ ಲಭ್ಯವಿರುವ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಕುಷ್ಟಗಿ: ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಆಸ್ಪತ್ರೆಯಲ್ಲಿ ಯಾರಾದರೂ ಹಣ ನೀಡಿದ್ದರೆ ಲೋಕಾಯುಕ್ತರಿಗೆ ದೂರು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್ ತಿಳಿಸಿದರು.
ಪಟ್ಟಣದ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಕಾರ್ಯಚಟುವಟಿಕೆ, ವೈದ್ಯಕೀಯ ಸೇವೆಗಳು ಹಾಗೂ ಲಭ್ಯವಿರುವ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವ ಜತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ವೈದ್ಯರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.ಬಳಿಕ ಆಸ್ಪತ್ರೆಯ ವೈದ್ಯೆ ಡಾ. ಚಂದ್ರಕಲಾ ಅವರು ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ವಿಚಾರಿಸಿದಾಗ ಲಂಚ ನೀಡಿರುವ ಕುರಿತು ಯಾರೂ ಹೇಳಿಲ್ಲ. ಆದರೂ ಈ ವಿಚಾರವನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದರು.ಹೆರಿಗೆ ಸೇರಿದಂತೆ ಆಸ್ಪತ್ರೆಯ ವೈದ್ಯಕೀಯ ಸೇವೆ ಪಡೆಯಲು ಹಣ ನೀಡಿರುವವರು ಲೋಕಾಯುಕ್ತರಿಗೆ ದೂರು ಸಲ್ಲಿಸಬೇಕು ಎಂದು ಹೇಳಿದರು.
ಆಸ್ಪತ್ರೆಯ ವಿಲೇವಾರಿ ಘಟಕ ಹಾಗೂ ಮೂಲಸೌಕರ್ಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಖಾಸಗಿ ಆಸ್ಪತ್ರೆಗಳಿಗೆ ಕಡಿಮೆಯಿಲ್ಲದ ರೀತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.ಡಿ ಗ್ರೂಪ್ ನೇಮಕಾತಿ ಶೀಘ್ರ ಅಂತಿಮ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಡಿ ಗ್ರೂಪ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ. ಈ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರೈತರ ಖಾತೆಗೆ ಬರ ಪರಿಹಾರ: ಬರ ಪರಿಹಾರ ವಿತರಣೆಯ ಕುರಿತು ಮಾತನಾಡಿದ ಅವರು, ರೈತರಿಗೆ ಪರಿಹಾರ ಜಮೆ ಮಾಡಲು ಅಗತ್ಯವಿರುವ ಎಲ್ಲ ದಾಖಲೆಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಮುಂದಿನ ಪ್ರಕ್ರಿಯೆಯಂತೆ ರೈತರ ಖಾತೆಗಳಿಗೆ ಪರಿಹಾರದ ಹಣ ಜಮೆಯಾಗಲಿದೆ ಎಂದು ತಿಳಿಸಿದರು.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಈಶ್ವರ ಸವಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು, ಮಹಾಂತೇಶ ಬುಕನಟ್ಟಿ ಇದ್ದರು.