ಬೆಂಗಳೂರಿನ ಥಣಿಸಂದ್ರದಲ್ಲಿ ಅಕ್ರಮವಾಗಿ ನಡೆಯುತ್ತಿದೆ ಎನ್ನಲಾದ ಜಾಮಿಯಾ ಮೊಹಮ್ಮದೀಯಾ ಮನ್ಸೂರಾ ರೆಸಿಡೆನ್ಸಿಯಲ್ ಸ್ಕೂಲ್ (ಮದರಸಾ) ಹಾಗೂ ಸಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
-ಚಾಂದ್ ಪಾಷಾ ಸಲ್ಲಿಸಿರುವ ಪಿಐಎಲ್ ಅರ್ಜಿ
ಕನ್ನಡಪ್ರಭ ವಾರ್ತೆ ಬೆಂಗಳೂರುಬೆಂಗಳೂರಿನ ಥಣಿಸಂದ್ರದಲ್ಲಿ ಅಕ್ರಮವಾಗಿ ನಡೆಯುತ್ತಿದೆ ಎನ್ನಲಾದ ಜಾಮಿಯಾ ಮೊಹಮ್ಮದೀಯಾ ಮನ್ಸೂರಾ ರೆಸಿಡೆನ್ಸಿಯಲ್ ಸ್ಕೂಲ್ (ಮದರಸಾ) ಹಾಗೂ ಸಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಬೆಂಗಳೂರಿನ ಪಾದರಾಯನಪುರ ನಿವಾಸಿ ಚಾಂದ್ ಪಾಷಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಅವರ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಸರ್ಕಾರ, ಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅಲ್ ಜಾಮೀಯಾ ಎಜುಕೇಷನಲ್ ಸೊಸೈಟಿಗೆ ನೋಟಿಸ್ ಜಾರಿಗೊಳಿಸಿತು.ತಾನು ಮಹಾರಾಷ್ಟ್ರ ಸೊಸೈಟಿಗಳ ನೋಂದಣಿ ಕಾಯ್ದೆ-1979ರಡಿ ನೋಂದಣಿ ಆಗಿರುವುದಾಗಿ ಅಲ್ ಜಾಮಿಯಾ ಮಹ್ಮದೀಯ ಸೊಸೈಟಿ ಹೇಳುತ್ತಿದೆ. ಆದರೆ, ಅಂತಹ ಯಾವುದೇ ದಾಖಲೆಗಳು ಲಭ್ಯವಿಲ್ಲ. ನೋಂದಣಿ ಇಲ್ಲದೆಯೇ ಈ ಸಂಸ್ಥೆ, ಬೆಂಗಳೂರಿನ ಥಣಿಸಂದ್ರದಲ್ಲಿ ಮದರಸಾ ಮತ್ತು ಶಾಲೆ ನಡೆಸುತ್ತಿದೆ. ಶಿಕ್ಷಣ ಇಲಾಖೆಯು 2025ರ ಮೇ 30ರಂದು ಮಾನ್ಯತೆ ರದ್ದುಪಡಿಸಿದ್ದು, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಆದರೆ, ಈ ಶಾಲೆಗೆ ಸರ್ಕಾರದಿಂದ 5 ಲಕ್ಷ ರು.ಅನುದಾನ ಬಿಡುಗಡೆಯಾಗಿದೆ. ಇಲ್ಲಿ ಉತ್ತರ ಪ್ರದೇಶ ಹಾಗೂ ಬಿಹಾರ ಸೇರಿ ಉತ್ತರ ಭಾರತದ ವಲಸೆ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಈ ಮದರಸಾ ಮತ್ತು ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
