ಸಾರಾಂಶ
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವ ಇರುವುದಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ಬೆಂಗಳೂರು : ಮುಂದಿನ 48 ಗಂಟೆಯಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಮುಂದಿನ ಎರಡು ದಿನ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಮುನ್ಸೂಚನೆ ನೀಡಲಾಗಿದೆ. ಜೂನ್ 10 ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮುಂದಿನ 24 ಗಂಟೆಯಲ್ಲಿ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಮುನ್ಸೂಚನೆ ನೀಡಲಾಗಿದೆ.