ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಅಧಿಕಾರಿಗಳು ದಿನದ 24 ಗಂಟೆಯೂ ಜಾಗೃತರಾಗಿ ಸಮಸ್ಯೆ ಬಗೆಹರಿಸಬೇಕು. ಇದಕ್ಕಾಗಿ ನಿಮಗೆ ಒದಗಿಸಿದ ಸವಲತ್ತುಗಳನ್ನು ಬಳಸಿಕೊಂಡು ಕ್ರಮ ಕೈಗೊಂಡು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರಿಗೆ ಆರೋಗ್ಯದ ಹಿತದೃಷ್ಟಿಯಿಂದ ಇದರ ಬಗ್ಗೆ ಅರಿವು, ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಗ್ರಾಮೀಣ ಮತ್ತು ನಗರದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಗ್ರಾಮದ ಅಭಿವೃದ್ಧಿ ಅಧಿಕಾರಿಗಳು, ನಗರದ ಮುಖ್ಯಾಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅವಶ್ಯಕ ಮುಂಜಾಗ್ರತೆ ವಹಿಸಬೇಕು. ಬಿಸಿಲಿನಲ್ಲಿ ಓಡಾಡುವುದನ್ನು ತೊರೆಯಬೇಕು. ಆರೋಗ್ಯಕ್ಕೆ ವಿಶೇಷ ಗಮನ ನೀಡಬೇಕು. ಆರೋಗ್ಯದಲ್ಲಿ ಏರುಪೇರಾದಲ್ಲಿ ತಕ್ಷಣ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವರು ತಿಳಿಸಿದರು.
ಕುಡಿಯುವ ನೀರಿಗಾಗಿ ಹೊಸ ಬೋರ್‌ವೆಲ್ ಕೊರೆಯುವುದು, ಫ್ಲಶಿಂಗ್, ಡೀಪೆನಿಂಗ್, ರೀ -ಡ್ರಿಲ್ಲಿಂಗ್ ಹಾಗೂ ಹ್ಯಾಂಡ್ ಪಂಪ್‌ಗಳ ಅಳವಡಿಸುವ ಮತ್ತು ರಿಪೇರಿ ಕಾಮಗಾರಿಗಳನ್ನು ತೆಗೆದುಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ನೀರು ಸರಬರಾಜಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ ಉದ್ಭವಿಸಿದ್ದಲ್ಲಿ ತಕ್ಷಣ ಆದ್ಯತೆ ಮೇಲೆ ದುರಸ್ತಿ ಕಾರ್ಯ ಕೈಗೊಂಡು ನೀರು ಸರಬರಾಜಿನಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು. ನಿಯಮಿತವಾಗಿ ಟ್ಯಾಂಕ್ ಪರಿಶೀಲನೆ ನಡೆಸಿ ನೀರು ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಟೆಂಡರ್ ಪ್ರಕ್ರಿಯೆಗಳ ಸಮಸ್ಯೆಯನ್ನು ತಕ್ಷಣ ಬಗೆಹರಿಸಿಕೊಳ್ಳಬೇಕು. ಪೈಪ್‌ಲೈನ್‌ಗಳನ್ನು ತಕ್ಷಣ ದುರಸ್ತಿಗೊಳಿಸಿ, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು. ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು. ಆಯಾ ತಹಸಿಲ್ದಾರರು, ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಹಾಗೂ ತೀವ್ರ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಯಾವುದೇ ಪರಸ್ಥಿತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಿದರು.ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದುರಿ ಸೇರಿದಂತೆ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು ಹಾಗೂ ತಾಲೂಕಿನ ಇಒ ಇದ್ದರು.