ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಹುನಗುಂದ ತಹಶೀಲ್ದಾರ ಕಚೇರಿ ಆವರಣದಲ್ಲಿ ಹಮ್ಮಿಕೊಂಡ ತಾಲೂಕಾ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತೋಡಿಕೊಳ್ಳಲು ಬಂದಾಗ ಅವರಿಗೆ ಮುಕ್ತವಾಗಿ ಭೇಟಿಗೆ ಅವಕಾಶ ಕಲ್ಪಿಸಿ, ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹುನಗುಂದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕೆಲಸವಾಗಬೇಕು ಎಂದರು.
6,724 ಅರ್ಜಿಗಳಲ್ಲಿ 5,792 ವಿಲೇವಾರಿ:ಜಿಲ್ಲೆಯಲ್ಲಿ ಪ್ರಜಾಸೇವಾ ಆಂದೋಲನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದ್ದು, ಐದು ತಾಲೂಕುಗಳಲ್ಲಿ ಕಾರ್ಯಕ್ರಮ ಪೂರ್ಣಗೊಂಡಿದೆ. ಹುನಗುಂದದಲ್ಲಿ ನಡೆದ ಕಾರ್ಯಕ್ರಮ ಆರನೇ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನವಾಗಿದೆ. ಜಿಲ್ಲೆಯಾದ್ಯಂತ 37 ಕಡೆ ಹೋಬಳಿ ಮಟ್ಟದಲ್ಲಿಯೂ ಕಾರ್ಯಕ್ರಮ ನಡೆಸಲಾಗಿದೆ.ಇದುವರೆಗೆ ಪ್ರಜಾಸೇವಾ ಆಂದೋಲನದ ಮೂಲಕ 6,724 ಅರ್ಜಿಗಳು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 5,792 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 932 ಅರ್ಜಿಗಳು ಬಾಕಿ ಉಳಿದಿದ್ದು, ಅವುಗಳನ್ನೂ ಆದ್ಯತೆಯ ಮೇರೆಗೆ ಪರಿಶೀಲಿಸಿ ಪರಿಹಾರ ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ. ಉಚಿತ ಸಹಾಯವಾಣಿ 1902ಕ್ಕೆ ಕರೆ ಮಾಡುವ ಮೂಲಕವೂ ಅಹವಾಲು ಹಾಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕರೆ ಮೂಲಕ ಬಂದ ಅರ್ಜಿಯನ್ನು ಖುದ್ದಾಗಿ ಪರಿಹರಿಸುವ ಕೆಲಸ ಮಾಡಲಾಗಿದೆ. ಜೊತೆಗೆ ಕ್ಯೂಆರ್ ಕೋಡ್ ಮೂಲಕವೂ ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಸರ್ಕಾರದ ಯೋಜನೆಗಳು ಕೇವಲ ಕಚೇರಿ ದಾಖಲೆಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಧಿಕಾರಿಗಳ ಕಚೇರಿಗೆ ಬಂದಾಗ ಅವರನ್ನು ಕಾಯಿಸದೆ, ಮುಕ್ತವಾಗಿ ಭೇಟಿಯಾಗಿ ಸಮಸ್ಯೆ ಆಲಿಸಿ, ನಿಯಮಾನುಸಾರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.
ರಾಜ್ಯ ಸರ್ಕಾರ ಕಳೆದ 100 ದಿನಗಳಲ್ಲಿ ಹಲವು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಸಾಮಾನ್ಯರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಭಾರತ ಜೋಡೋ, ನೇಗಿಲಯೋಗಿ, ಭೂ ಗ್ಯಾರಂಟಿ, ಗ್ರಾಮಾನುಭವ ಹಾಗೂ ತೇಗ ಸಿರಿ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಗ್ರಾಮೀಣ ರಸ್ತೆ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ರಾಜ್ಯಕ್ಕೆ ₹16 ಸಾವಿರ ಕೋಟಿ ಅನುದಾನ ಘೋಷಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳ ರಸ್ತೆ, ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದರು.
2.59 ಲಕ್ಷಕ್ಕೂ ಅಧಿಕ ರೈತರಿಗೆ ತಲಾ ₹5 ಸಾವಿರ ಪರಿಹಾರ:ಜಿಲ್ಲೆಯಲ್ಲಿ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ. ಜಿಲ್ಲೆಯ 2,59,419 ರೈತರಿಗೆ ತಲಾ ₹5,000 ಪರಿಹಾರ ನೀಡಲಾಗುತ್ತಿದ್ದು, ಪರಿಹಾರದ ಮೊತ್ತವನ್ನು ಶೀಘ್ರದಲ್ಲೇ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಅನೀಲ ದಡ್ಡಿ, ತಾಲೂಕು ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೇ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರ ಪ್ರದೀಪ ಹಿರೇಮಠ ಸೇರಿ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಬಾಕ್ಸ್ ....84 ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣೆ
ಪ್ರಜಾಸೇವಾ ಆಂದೋಲನದ ಅಂಗವಾಗಿ ಬಂದ 197 ಅರ್ಜಿಗಳ ಪೈಕಿ 84 ಅರ್ಜಿ ಇತ್ಯರ್ಥಪಡಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಯಿತು. ಕೃಷಿ ಇಲಾಖೆಯಿಂದ 5, ತೋಟಗಾರಿಕೆ ಇಲಾಖೆ 5, ಕಾರ್ಮಿಕ ಇಲಾಖೆ 6, ರೇಷ್ಮೆ ಇಲಾಖೆ 2, ಕಂದಾಯ ಇಲಾಖೆ 42, ಪಶುಸಂಗೋಪನಾ ಇಲಾಖೆ, 7, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ 4, ಮೀನುಗಾರಿಕೆ ಇಲಾಖೆ 10, ಸಮಾಜ ಕಲ್ಯಾಣ ಇಲಾಖೆ 3.