ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಅಭಿವೃದ್ಧಿ ಪರಿಶೀಲನಾ ಸಭೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಉಡುಪಿ: ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಅಭಿವೃದ್ಧಿ ಪರಿಶೀಲನಾ ಸಭೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ, ಕೆಲವು ಬಡ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿಗಳ ವಿತರಣೆಯಲ್ಲಿ ವಿಳಂಬವಾಗಿ ಅವರು ವೈದ್ಯಕೀಯ ನೆರವು ಪಡೆಯಲು ತೊಂದರೆಯಾಗಿರುವ ಬಗ್ಗೆ ಚರ್ಚೆ ನಡೆಯಿತು. ಶಾಸಕರ ಅಂತಹ ಕುಟುಂಬಗಳಿಗೆ ತಕ್ಷಣ ಪಡಿತರ ಚೀಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಮಳೆಗಾಲ ಆರಂಭವಾಗಿರುವುದರಿಂದ ರಸ್ತೆಯ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ನಿರ್ಮಾಣ ಹಾಗೂ ಚರಂಡಿಯಲ್ಲಿರುವ ಹುಲ್ಲು ಮತ್ತು ಹೂಳು ವಿಲೇವಾರಿಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಅಂತಹ ಶಾಲೆಗಳ ದುರಸ್ತಿಗೆ ಅಗತ್ಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸುವಂತೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ತಾಪಂ ಆಡಳಿತಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ, ತಹಸೀಲ್ದಾರ್ ಗುರುರಾಜ್, ಉಡುಪಿ ನಗರ ಸಭೆಯ ಆಯುಕ್ತ ಮಹಾಂತೇಶ್ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.