ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಸಮರ್ಪಕ ಜಾರಿಗೊಳಿಸಿ: ಸಂಸದ ಕೋಟ ಸೂಚನೆ

| Published : Feb 18 2025, 12:31 AM IST

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಸಮರ್ಪಕ ಜಾರಿಗೊಳಿಸಿ: ಸಂಸದ ಕೋಟ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳಾ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಅಧಿಕಾರಿಗಳಿಗೆ ಕಾರ್ಯಾಗಾರ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಮಾಜದಲ್ಲಿ ಹೆಣ್ಣಮಕ್ಕಳ ಬಗೆಗಿನ ತಾರತಮ್ಯ ಭಾವನೆ ಹೋಗಲಾಡಿಸುವುದಕ್ಕಾಗಿಯೇ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಅಧಿಕಾರಿಗಳು ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿದರೆ ಮಾತ್ರ ಉದ್ದೇಶ ಈಡೇರುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶನಿವಾರ, ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳಾ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಅಧಿಕಾರಿಗಳಿಗೆ ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹೆಣ್ಣು ಭ್ರೂಣ ಹತ್ಯೆ ತಡೆ, ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ, ಗೌರಯುತ ಜೀವನಕ್ಕೆ ಅನುವು ಮಾಡಿಕೊಟ್ಟಾಗಷ್ಟೇ ಗಂಡು-ಹೆಣ್ಣು ಸಮಾನತೆ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಜೀತ ಪದ್ಧತಿ ರದ್ಧತಿ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಇಂದಿಗೂ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿ ಆಶಾದಾಯಕವಾಗಿದೆ. ಗಂಡು ಮಕ್ಕಳಿಗೆ ಸರಿಸಮಾನವಾಗಿ ಹೆಣ್ಣು ಮಕ್ಕಳನ್ನು ಬೆಳೆಸಬೇಕು. ಹೆಣ್ಣು ಮಕ್ಕಳಿಗೆ ಅನುಕಂಪ ತೋರದೇ ಅವರುಗಳಿಗೆ ಎಲ್ಲಾ ಕ್ಷೇತ್ರಗಳಿಯೂ ಅವಕಾಶ ನೀಡಬೇಕು ಎಂದರು.

ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ನಿದೇಶಕಿ ನಿರ್ಮಲಾ ಕುಮಾರಿ, ನ್ಯಾಯವಾದಿ ಪ್ರದೀಪ್ ಪಿ.ಜೆ ಹಾಗೂ ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ ಉಪಾಧ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು.

ಪೊಲೀಸ್ ನಿರೀಕ್ಷಕ ಡಾ.ಡಿ.ಟಿ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್ ಇದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಸ್ವಾಗತಿಸಿದರು. ದೀಪಾ ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ ವಂದಿಸಿದರು.