ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮವಹಿಸಬೇಕು. ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದು ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು.
ಮುಂಡಗೋಡ: ಸರ್ಕಾರದ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಲ್ಲಾಭಕ್ಷ ಸೂಚಿಸಿದರು.
ಶನಿವಾರ ಪಟ್ಟಣಕ್ಕೆ ಭೇಟಿ ನೀಡಿ ಸರ್ಕಾರಿ ಆಸ್ಪತ್ರೆ, ಹಾಸ್ಟೆಲ್, ಅಂಗನವಾಡಿ, ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿ ಸೇರಿದಂತೆ ತಾಲೂಕಿನ ವಿವಿಧ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಇದಕ್ಕೂ ಮುನ್ನ ಇಲ್ಲಿಯ ತಾಲೂಕು ಪಂಚಾಯಿತಿಯಲ್ಲಿನ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮವಹಿಸಬೇಕು. ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದು ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲ್ವಿಚಾರಣೆ ಹಾಗೂ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು.
ನಂತರ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಗ್ರಾಮ ಪಂಚಾಯಿತಿಗಳಲ್ಲಿನ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಪರಿಶೀಲಿಸಿದರು. ವಿಶೇಷವಾಗಿ ಘನತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕಗಳ ಕಾರ್ಯನಿರ್ವಹಣೆ, ತ್ಯಾಜ್ಯ ಸಂಗ್ರಹಣೆ, ವಿಂಗಡಣೆ ಹಾಗೂ ವಿಲೇವಾರಿ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡು, ಘನತ್ಯಾಜ್ಯ ನಿರ್ವಹಣಾ ಘಟಕಗಳು ನಿರಂತರವಾಗಿ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.ಬಳಿಕ ಮುಂಡಗೋಡ ಪಟ್ಟಣದ ಅಂಬೇಡ್ಕರ ಭವನದಲ್ಲಿ ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ವಿವಿಧ ಆರೋಗ್ಯ ಸೇವೆಗಳು ಹಾಗೂ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ತಾಲೂಕಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲ ಸೌಲಭ್ಯಗಳು ಹಾಗೂ ಹಾಸ್ಟೆಲ್‌ನಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ, ಹಿಂದುಳಿದ ಇಲಾಖೆ ಅಧಿಕಾರಿ ಕರಿಯಪ್ಪ, ಜಿಪಂ ಸಹಾಯಕ ಎಂಜಿನಿಯರ್ ಪ್ರದೀಪ ಭಟ್ ಮುಂತಾದವರು ಉಪಸ್ಥಿತರಿದ್ದರು.