ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು, ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ವಿವಿಧ ಸೇವೆ ತಲುಪಿಸುವಲ್ಲಿ ಗ್ರಾಪಂ ನೌಕರರ ಪಾತ್ರ ಮಹತ್ವದ್ದಾಗಿದೆ
ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಪಂಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.
ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು, ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ವಿವಿಧ ಸೇವೆ ತಲುಪಿಸುವಲ್ಲಿ ಗ್ರಾಪಂ ನೌಕರರ ಪಾತ್ರ ಮಹತ್ವದ್ದಾಗಿದೆ. ಪಂಚಾಯಿತಿ ವ್ಯಾಪ್ತಿಯ ಸ್ವಚ್ಛತೆ, ಕುಡಿಯುವ ನೀರು, ತೆರಿಗೆ ವಸೂಲಿ, ದಾಖಲೆಗಳ ನಿರ್ವಹಣೆ, ವಿವಿಧ ಪ್ರಮಾಣಪತ್ರಗಳ ವಿತರಣೆ, ಸರ್ಕಾರಿ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ಕೆಲಸ ನೌಕರರು ನಿರ್ವಹಿಸುತ್ತಿದ್ದಾರೆ. ಆದರೆ ಎಲ್ಲ ಜವಾಬ್ದಾರಿ ನಿರ್ವಹಿಸುತ್ತಿದ್ದರೂ ಅವರಿಗೆ ಸಮರ್ಪಕ ವೇತನ ಹಾಗೂ ಸೇವಾ ಭದ್ರತೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಗ್ರಾಪಂ ನೌಕರರ ಕೆಲಸದ ಸ್ವರೂಪ ಹಾಗೂ ಜವಾಬ್ದಾರಿಗಳಿಗೆ ಅನುಗುಣವಾಗಿ ವೇತನ ನೀಡಬೇಕು. ಬಾಕಿ ಇರುವ ವೇತನ ಹಾಗೂ ಇತರೆ ಸೌಲಭ್ಯ ಕೂಡಲೇ ಬಿಡುಗಡೆ ಮಾಡಬೇಕು. ನೌಕರರಿಗೆ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಸುರಕ್ಷಿತ ವಾತಾವರಣ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿ, ವಿವಿಧ ಗ್ರಾಪಂ ನೌಕರರು ಹಾಗೂ ಕಾರ್ಮಿಕರಿದ್ದರು.