ಕನ್ನಡಪ್ರಭ ವಾರ್ತೆ ಬೆಳಗಾವಿ
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮ ವಹಿಸಬೇಕು. ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ದೊರೆಯಬೇಕಿರುವ ಎಲ್ಲ ಸೌಕರ್ಯಗಳು ಕಡ್ಡಾಯವಾಗಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ 2025-26ನೇ 3ನೇ ಮತ್ತು 4ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮಕ್ಕಳ ಮಾಹಿತಿ ಪಡೆದು ಒಂದನೇ ತರಗತಿ ಪ್ರವೇಶಕ್ಕೆ ಅರ್ಹವಿರುವ ಮಕ್ಕಳನ್ನು ಶಾಲೆಗಳಿಗೆ ಸೇರ್ಪಡೆಗೊಳಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮನೆ ಮನೆಗಳನ್ನು ಸಮೀಕ್ಷೆ ನಡೆಸಿ ಅವರನ್ನು ಶಾಲೆಗಳಿಗೆ ಸೇರ್ಪಡೆಗೊಳಿಸುವಂತೆ ಸೂಚಿಸಬೇಕು ಎಂದು ತಿಳಿಸಿದರು.
ರಾಜ್ಯದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಸದಾಶಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ದೂರವಾಗದಂತೆ ಜಾಗೃತಿ ಮೂಡಿಸಬೇಕು. ವಲಸೆ ಹೋದ ಮಕ್ಕಳನ್ನು ಸ್ಟಾಟ್ಸ್ ಐ.ಡಿ ಮೂಲಕ ಗುರುತಿಸಿ ಮರಳಿ ಶಾಲೆಗೆ ತರುವ ಕಾರ್ಯವಾಗಬೇಕು. ಶಾಲೆಗಳಲ್ಲಿನ ಶೌಚಾಲಯಗಳ ದುರಸ್ತಿ ಕೈಗೊಳ್ಳಬೇಕು. ಆಯೋಗದ ಸದಸ್ಯರು ಅನೀರಿಕ್ಷಿತವಾಗಿ ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ತಿಳಿಸಿದರು.ಆಯೋಗಕ್ಕೆ ನೇಮಕವಾದ ನಾಮನಿರ್ದೇಶಿತ ಸದಸ್ಯರು ನಿಯಮಿತವಾಗಿ ಸಭೆಗಳನ್ನು ಜರುಗಿಸಿ ತಮ್ಮ ವ್ಯಾಪ್ತಿಯಲ್ಲಿನ ಕುಂದು ಕೊರತೆಗಳನ್ನು ಆಲಿಸಿ ಆಯೋಗದ ಸಭೆಯಲ್ಲಿ ತಮ್ಮ ವ್ಯಾಪ್ತಿಯ ಕುಂದು ಕೊರತೆಗಳ ಮಾಹಿತಿ ನೀಡಬೇಕು ಎಂದು ಅಧ್ಯಕ್ಷ ಯು. ನಿಸಾರ್ ಅಹಮ್ಮದ್ ತಿಳಿಸಿದರು.ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಶಾಲೆಗಳಲ್ಲಿನ ಶೌಚಾಲಯ ನಿರ್ಮಾಣಕ್ಕೆ ಹಾಗೂ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಶಾಲಾ ಮಕ್ಕಳಿಗಾಗಿ ಬೆಂಚ್ ಖರೀದಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಕೊಳಗೇರಿ ಪ್ರದೇಶಗಳಲ್ಲಿನ ವಿಶೇಷಚೇತನರ ಸಮೀಕ್ಷಾ ಕಾರ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದುಕೊಳ್ಳುವಂತೆ ತಿಳಿಸಿದರು.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಆಸೀಫ್(ರಾಜು)ಸೇಠ ಮಾತನಾಡಿ, ವಿವಿಧ ಶೈಕ್ಷಣಿಕ ಹಂತಗಳ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಪಡೆಯಲು ಸಹಾಯವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಮೂಲಕ ಒದಗಿಸಬೇಕು ಎಂದರು.ಅಲ್ಪಸಂಖ್ಯಾತ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸಲು ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸಲು, ಅಗತ್ಯ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಎಫ್.ಯು.ಪೂಜೇರ ಸಭೆ ನಿರ್ವಹಿಸಿದರು. ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಆಯೋಗದ ನಾಮನಿರ್ದೇಶಿತ ಸದಸ್ಯರು ಸಭೆಯಲ್ಲಿ ಹಾಜರಿದ್ದರು.------
ಕೋಟ್‌ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿನ ಯುವಕರಲ್ಲಿನ ಕೌಶಲ್ಯಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಬೇಕು. ಕಟ್ಟಡ ಕಾರ್ಮಿಕರಿಗೆ ಇರುವಂತಹ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಕೊಳಗೇರಿ ಪ್ರದೇಶಗಳಲ್ಲಿನ ಕೆಲ ವಿಶೇಷಚೇತನರಿಗಾಗಿ ಸರ್ಕಾರದಿಂದ ಜಾರಿಯಲ್ಲಿರುವ ವಿವಿಧ ಯೋಜನೆಗಳು ದೊರಕುತ್ತಿಲ್ಲ. ಈ ಕುರಿತು ಜಿಲ್ಲೆಯ ಎಲ್ಲ ಕೋಳಗೇರಿ ಪ್ರದೇಶಗಳಲ್ಲಿ ಸಮೀಕ್ಷೆ ಜರುಗಿಸಿ ಪ್ರತಿಯೊಬ್ಬ ವಿಶೇಷಚೇತನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡಲು ಅಧಿಕಾರಿಗಳು ಶ್ರಮಿಸಬೇಕು.ಯು.ನಿಸಾರ್ ಅಹಮ್ಮದ್, ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ