ಕನ್ನಡಪ್ರಭ ವಾರ್ತೆ ಮಂಡ್ಯ

ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಪನ್ಮೂಲಗಳ ಸಮರ್ಪಕ ಬಳಕೆ, ಪ್ರತಿ ಇಲಾಖೆಯ ವೇತನ, ವೇತನೇತರ ಘಟಕಗಳ ಅನುದಾನ ಹಂಚಿಕೆ, ಕ್ರಿಯಾ ಯೋಜನೆಗಳು ಹಾಗೂ ವೆಚ್ಚದ ವಿವರಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಂಶವಾರು ಪರಿಶೀಲಿಸಿ ಇಲಾಖೆಗಳ ನಡುವಿನ ಸಮನ್ವಯ ಮತ್ತು ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಪಂ ಆಡಳಿತಾಧಿಕಾರಿ ಮನೋಜ್ ಕುಮಾರ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜಿಪಂ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಗದಿತ ಕಾಲಮಿತಿಯಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಬೇಕು. ಪ್ರವಾಹ ಪುನರ್ವಸತಿ ಕೇಂದ್ರಗಳಾಗಿ ಗುರುತಿಸಲ್ಪಟ್ಟ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಇತರೆ ಸರ್ಕಾರಿ ಕಟ್ಟಡಗಳ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಗಳನ್ನು ವಿಬಿ ಜಿ-ರಾಮ್ ಜಿ ಸೇರಿದಂತೆ ವಿವಿಧ ಯೋಜನೆಗಳೊಂದಿಗೆ ಸಂಯೋಜಿಸಿ ಕೈಗೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸೂಚಿಸಿದರು. ಇದರಿಂದ ಉಳಿಯುವ ಅನುದಾನವನ್ನು ಇತರೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ತಿಳಿಸಿದರು.

ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕ್ರೀಡೆ ಸೇರಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳು ನೈಜ ಅಗತ್ಯತೆ ಆಧರಿಸಿ ಅನುಷ್ಠಾನಗೊಳ್ಳಬೇಕು. ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಪಾರದರ್ಶಕತೆ ಕಾಪಾಡಿ ಅರ್ಹ ಫಲಾನುಭವಿಗಳನ್ನೇ ಆಯ್ಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾಪಟುಗಳು ಹಾಗೂ ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯಯೋಜನೆ ರೂಪಿಸುವಂತೆ ಹೇಳಿದರು.


ಸಭೆಯಲ್ಲಿ ಮಂಡಿಸಲಾದ ಇಲಾಖಾವಾರು ಕ್ರಿಯಾ ಯೋಜನೆಗಳನ್ನು ಪರಿಶೀಲಿಸಿದ ಅವರು, ಅಗತ್ಯ ತಿದ್ದುಪಡಿಗಳೊಂದಿಗೆ ಯೋಜನೆಗಳಿಗೆ ಅನುಮೋದನೆ ನೀಡಿ, ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಸದರಿ ಕಾರ್ಯಕ್ರಮಗಳನ್ನು ಪರಿಶೀಲಿಸಿ ಸರ್ಕಾರದ ಮಾರ್ಗಸೂಚಿಗಳನ್ವಯ ಹಾಗೂ ನಿಯಮಾನುಸಾರ ಅನುಷ್ಠಾನಗೊಳಿಸುವಂತೆ ಸೂಚಿಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವೇತನ ಮತ್ತು ವೇತನೇತರ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಮಂಡಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಕಾರಿ ಧನುಷ್, ಜಿಪಂ ಉಪ ಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಪಿಆರ್‌ಡಿ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಲ್ಲಾ ಅರೋಗ್ಯ ಅಕಾರಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

--------

₹421.70 ಕೋಟಿ ಅನುದಾನ ಹಂಚಿಕೆ

2026- 27ನೇ ಸಾಲಿಗೆ ಜಿಪಂಗೆ ಒಟ್ಟು ₹421.70 ಕೋಟಿ ಅನುದಾನ ಹಂಚಿಕೆಯಾಗಿದೆ. ವೇತನ, ವೇತನೇತರ ವೆಚ್ಚ, ಎಸ್ಸಿಪಿ, ಟಿಎಸ್ಪಿ, ಸಾಮಗ್ರಿಗಳ ಖರೀದಿ, ಫಲಾನುಭವಿ ಆಧಾರಿತ ಯೋಜನೆಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಇಲಾಖಾವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ವಿವರಿಸಿದರು.

ರಸ್ತೆ, ಸೇತುವೆ, ಶಾಲಾ ಕಟ್ಟಡ, ಅಂಗನವಾಡಿ, ಆರೋಗ್ಯ ಸಂಸ್ಥೆಗಳು ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗಿದೆ. ವಿಬಿ-ಜಿ ರಾಮ್ ಜಿ ಯೋಜನೆಯಡಿ ಜಿಲ್ಲೆಯ ಶಾಲೆಗಳಲ್ಲಿ ಅಗತ್ಯವಿರುವ 281 ಶೌಚಾಲಯಗಳ ನಿರ್ಮಾಣ ಕಾಮಗಾರಿಗಳನ್ನು ಈ ವರ್ಷ ಕೈಗೆತ್ತಿಕೊಳ್ಳಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ, ಜಿಪಿಎಸ್ ಆಧಾರಿತ ಛಾಯಾಚಿತ್ರಗಳು ಹಾಗೂ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯಡಿ ಶಾಲೆಗಳ ಅವಶ್ಯಕತೆ ಆಧರಿಸಿ ಕಂಪ್ಯೂಟರ್, ಪ್ರಿಂಟರ್ ಹಾಗೂ ಇತರೆ ಶೈಕ್ಷಣಿಕ ಸಾಮಗ್ರಿಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.