ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರವು ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಹೇಳಿದರು.

ಉಡುಪಿ: ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರವು ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಹೇಳಿದರು.ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎನ್.ಐ.ಸಿ ಹಾಲ್‌ನಲ್ಲಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯಡಿ ಹಿರಿಯ ನಾಗರಿಕರಿಗೆ ಒಂದು ದಿನದ ನೃತ್ಯ ಚಿಕಿತ್ಸೆ (ಲಘು ಚಲನೆಯ ವ್ಯಾಯಾಮ), ಕಲಾ ಚಿಕಿತ್ಸೆ, ಏಕಪಾತ್ರಾಭಿನಯ ಮತ್ತು ಸಂಗೀತ ಚಿಕಿತ್ಸಾ ಕಾರ್ಯಕ್ರಮಗಳು, ಒಂದು ದಿನದ ಇಂಟರ್ ಜೆನರೇಷನ್ ಬಾಂಡಿಂಗ್ ಮೇಳ, ಆರೋಗ್ಯ ಮತ್ತು ವೈದ್ಯಕೀಯ ಶಿಬಿರಗಳು, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 ರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಒಂದು ದಿನದ ಕಾರ್ಯಾಗಾರ ಮತ್ತು ತಾಲೂಕು ಮಟ್ಟದಲ್ಲಿ ಕಾನೂನು ಅರಿವು ಮತ್ತು ಸಹಾಯ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದೆ ಎಂದರು.ಕಾರ್ಯಕ್ರಮಗಳ ಅಂಗವಾಗಿ ಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾನೂನು ಅರಿವು, ಆರೋಗ್ಯ ತಪಾಸಣೆ, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ, ಆಪ್ತಸಮಾಲೋಚನೆ ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾಧನೆಗೈದ ಶತಾಯುಷಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನ ಮಾಡಲಾಗುವುದು ಎಂದರು.

ಹಿರಿಯ ನಾಗರಿಕರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಯೋಮಾನಕ್ಕೆ ಅನುಗುಣವಾದ ಸುರಕ್ಷಿತ ಚಟುವಟಿಕೆಗಳನ್ನು ಆಯೋಜಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದರು.

ಹಿರಿಯ ನಾಗರಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ವೃದ್ಧಾಶ್ರಮಗಳಲ್ಲಿ ಕ್ರಿಯಾಶೀಲರಾಗಿರುವ ಹಿರಿಯ ನಾಗರಿಕರನ್ನು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದ ಅವರು, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಹಿರಿಯ ನಾಗರಿಕರ ಸಂಘಗಳು, ಸ್ವಯಂಸೇವಾ ಸಂಸ್ಥೆಗಳು ಕಾರ್ಯಕ್ರಮಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ರೆಡ್‌ಕ್ರಾಸ್ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು, ಲೀಡ್ ಕಾಲೇಜು ಪ್ರಾಂಶುಪಾಲೆ ಡಾ. ನಿಕೇತನಾ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಹೆಗಡೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಕಾರ್ಯದರ್ಶಿ ಮಮತಾ ಶೆಟ್ಟಿ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.