ಸಾರಾಂಶ
ಯಲ್ಲಾಪುರ: ಚುನಾವಣಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ. ಅದಕ್ಕೆ ಸಂಬಂಧಿಸಿದಂತೆ ಜನರಿಗೆ ಕೊಟ್ಟ ಗ್ಯಾರಂಟಿ ತಲುಪುತ್ತಿದೆಯೊ ಇಲ್ಲವೊ ಎಂಬುದರ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯಾಲಯ ತೆರೆದಿದ್ದು, ಅದಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ಆಯ್ಕೆ ಮಾಡಿದ್ದೇವೆ. ಎಲ್ಲ ರೀತಿಯ ಸಹಾಯ ಸಹಕಾರ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಆವಾರದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿ, ರಾಜ್ಯದ ಇತಿಹಾಸದಲ್ಲಿ ಪಂಚ ಗ್ಯಾರಂಟಿ ಯೋಜನೆ ಏಕಕಾಲಕ್ಕೆ ಅನುಷ್ಠಾನಕ್ಕೆ ತಂದು ಬಡವರ ಬಗ್ಗೆ ಕಾಳಜಿ ತೋರಿ ಆರ್ಥಿಕ ತೊಂದರೆ ಲೆಕ್ಕಿಸದೆ ಜನತೆಯ ಸಂಕಷ್ಟಕ್ಕೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಹಳಿಯಾಳ ಶಾಸಕ, ಆಡಳಿತ ಸುಧಾರಣಾ ಕಮಿಟಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಮಾತನಾಡಿ, ಜನರ ಆಶೀರ್ವಾದದಿಂದ ಅವರ ಸೇವೆಗಾಗಿ ಆಯ್ಕೆಯಾದ ನಂತರ ಪಕ್ಷ ಪಂಗಡ ತೊರೆದು ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕು. ಆ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿ ಬಡವರ ಕಷ್ಟಕ್ಕೆ ಸಹಾಯವಾಗಬಲ್ಲ ಮಾರ್ಗ ಹುಡುಕಿದ್ದಾರೆ ಎಂದರು.ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ಪಂಚ ಗ್ಯಾರಂಟಿಗಳ ಅವಶ್ಯಕತೆ ಇಲ್ಲದಿರುವ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳದಿದ್ದಲ್ಲಿ ಅರ್ಹ ಬಡವರಿಗೆ ದಕ್ಕುತ್ತದೆ ಎಂದರು.
ಇದಕ್ಕೂ ಮುನ್ನ ತಾಲೂಕು ಪಂಚಾಯಿತಿ ಆವಾರದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ತಾಲೂಕು ಸಮಿತಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ, ಉಪಾಧ್ಯಕ್ಷ ಡಿ.ಎನ್. ಗಾಂವ್ಕರ್, ಸಹಾಯಕ ಆಯುಕ್ತೆ ಕಾವ್ಯಾರಾಣಿ, ಯಲ್ಲಾಪುರ ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ. ಭಟ್ಟ, ಪಂಚ ಗ್ಯಾರಂಟಿ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಭಾಗ, ತಹಸೀಲ್ದಾರ್ ಅಶೋಕ ಭಟ್ಟ, ತಾಪಂ ಆಡಳಿತಾಧಿಕಾರಿ ನಟರಾಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಧನವಾಡಕರ ಉಪಸ್ಥಿತರಿದ್ದರು.