ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲು ಶ್ರಮಿಸಲಾಗುವುದು ಎಂದು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ಶಿರವಾರ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ, ಅವರು ಮಾತನಾಡಿದರು.

ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನ ಹಂಚಿಕೆ ಸಂಬಂಧ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ ಮಾಡಲಾಗುವುದು ಎಂದರು.

ನಮ್ಮ ಸರ್ಕಾರವು ಹಸಿವಿನಿಂದ ಯಾರೊಬ್ಬರೂ ಮಲಗಬಾರದು ಎಂದು ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ವಿತರಿಸಿ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿಗಳ ಮೂಲಕ ಸರ್ಕಾರ ಮಹತ್ತರ ಬದಲಾವಣೆಗೆ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.


2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ:

ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ನೀಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಅವಕಾಶ ನೀಡುತ್ತಾರೆ ಎಂದು ಸಚಿವರು ಬಲವಾದ ವಿಶ್ವಾಸ ವ್ಯಕ್ತಪಡಿಸಿದರು.

ಶಿರವಾರ ಗ್ರಾಮದಲ್ಲಿನ ಇನ್ನುಳಿದ ರಸ್ತೆ, ಚರಂಡಿ, ನಿವೇಶನ ಹಕ್ಕು ಪತ್ರ ಸಮಸ್ಯೆ, ಕನಕ ಭವನ ನಿರ್ಮಾಣ ಸೇರಿ ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು.

ಶಿರವಾರ ಗ್ರಾಮಸ್ಥರಿಗೆ ಅದೇ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಿಸಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಜತೆಗೆ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರಲ್ಲದೇ, ತಮ್ಮ ಜಿಲ್ಲಾ ಪ್ರವಾಸದ ವೇಳೆ ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಆಗ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ತಹಸೀಲ್ದಾರ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಜಿಲ್ಲೆಯ ತೂಬಗೇರೆ ಹೋಬಳಿ ವ್ಯಾಪ್ತಿಯಲ್ಲಿ ಸಚಿವರು ₹25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಅಷ್ಟೇ ಅಲ್ಲದೇ ಈ ಭಾಗಕ್ಕೆ ವೃಷಭಾವತಿ ನೀರು ತರಲಾಗುತ್ತಿದ್ದು, ಇದರಿಂದ ಜಮೀನಿನಲ್ಲಿ ಬೋರ್ವೆಲ್ ಗಳ ಅಂತರ್ಜಲ ಮಟ್ಟವನ್ನು ವೃದ್ಧಿಯಾಗಿಸಲು ಶ್ರಮಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಯಪ ಸದಸ್ಯರಾದ ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯ ಮುನಿರಾಜು, ತೂಬಗೇರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ಧಪ್ಪ, ತಹಸೀಲ್ದಾರ್‌ ಮಲ್ಲಪ್ಪ ಯರಗೋಳ, ಹಣಬೆ ಪಿಡಿಒ ಸೌಮ್ಯ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.