ಜ.30ರೊಳಗೆ ಮಕ್ಕಳ ರಕ್ಷಣಾ ನೀತಿ ಜಾರಿ ಕಡ್ಡಾಯ: ಡಾ.ತಿಪ್ಪೇಸ್ವಾಮಿ ಕೆ.ಟಿ.

| Published : Jan 05 2025, 01:32 AM IST

ಜ.30ರೊಳಗೆ ಮಕ್ಕಳ ರಕ್ಷಣಾ ನೀತಿ ಜಾರಿ ಕಡ್ಡಾಯ: ಡಾ.ತಿಪ್ಪೇಸ್ವಾಮಿ ಕೆ.ಟಿ.
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ನಗರದ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ವಿಷಯದ ಕುರಿತು ಶಿಕ್ಷಣ, ಕಾರ್ಮಿಕ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ತರಬೇತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿಯ ನಿಯಮಾವಳಿಗಳನ್ನು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿಸಿಎಂ, ಅಲ್ಪಸಂಖ್ಯಾತ, ಸಮಾಜಕಲ್ಯಾಣ, ಕೋಚಿಂಗ್ ಸೆಂಟರ್ ಸೇರಿದಂತೆ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜ.30ರೊಳಗೆ ಅನುಷ್ಠಾನಗೊಳಿಸಿ ಅದರ ವರದಿಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಆಯೋಗ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.ಅವರು ಶನಿವಾರ ನಗರದ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ವಿಷಯದ ಕುರಿತು ಶಿಕ್ಷಣ, ಕಾರ್ಮಿಕ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಆಯೋಗವು ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ಜಿಲ್ಲೆಗೆ ಭೇಟಿ ನೀಡಲಿದೆ. ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನ ಮಾಡದಿರುವುದು ಕಂಡುಬಂದಲ್ಲಿ ಹಾಗೂ ತಪ್ಪು ಮಾಹಿತಿ ನೀಡಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು.ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದು, ಜ.30ರೊಳಗಾಗಿ ಮಕ್ಕಳ ರಕ್ಷಣಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಿ ರಾಜ್ಯಕ್ಕೆ ಮಾದರಿಯಾಗಬೇಕು. ಇದಕ್ಕೆ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಬೇಕು ಎಂದರು.ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್., ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಯುನಿಸೆಫ್‌ನ ಸಿಸ್ಟರ್ ದುಲ್ಸಿನಾ ಕ್ರಾಸ್ತಾ, ಎಎಸ್ಪಿ ಸಿದ್ದಲಿಂಗಪ್ಪ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ., ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಮನು ಪಟೇಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಜ್ಯೋತಿ ನಿರೂಪಿಸಿ, ವಂದಿಸಿದರು.