ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಳ್ಳಲಿದ್ದು, ಇನ್ನು ಮುಂದೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾಹಿತಿ ನೀಡಿದರು.ಈ ಕುರಿತು ಮಾಹಿತಿ ನೀಡಿದ ಅವರು, ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೆ ನಕ್ಷೆ (ಸ್ಕೇಚ್) ನಮೂನೆ 11ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 5, 2016 ರಿಂದ ಸಂಯೋಜನೆ ಮಾಡಲಾಗಿದೆ. ಅಲ್ಲದೇ ಗ್ರಾಪಂ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಜುಲೈ 18, 2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸೆ.9 ರಿಂದ ಜಾರಿಗೆ ಬರುವಂತೆ ಆದೇಶ:ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ 2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ಜನವರಿ 29, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿದೆ. ನಗರಾಭಿವೃದ್ಧಿ ಇಲಾಖೆಯು ಬಾಗಲಕೋಟೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 9 ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದರು.
ತಂತ್ರಾಂಶದ ಸದುಪಯೋಗ ಪಡೆಯಿರಿ:ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ನೋಂದಣಿ ಮಾಡುತ್ತಿದ್ದು, ಸಾರ್ವಜನಿಕರು ತಮ್ಮ ತಮ್ಮ ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ನಮೂದಿಸಿ ಇ-ಆಸ್ತಿ ಉತಾರೆ ಪಡೆದುಕೊಳ್ಳಬೇಕು. ಈ ತಂತ್ರಾಂಶದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.