ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

ಹೊಸಪೇಟೆ: ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ನೀರು ಸರಬರಾಜು ಯೋಜನೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ತಾಂತ್ರಿಕ ನೆಪವೊಡ್ಡಿ ವಿಳಂಬ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಕೆ.ಜಿ. ಜಗದೀಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಪಂ ಕಚೇರಿಯಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಸಪೇಟೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ನೀರು ಸರಬರಾಜು ಯೋಜನೆಗಳ ದಾಖಲೆಪತ್ರ ಪರಿಶೀಲಿಸಿದ ಅವರು, ಯಾವುದೇ ಕಾಮಗಾರಿ ಅನುಷ್ಠಾನಗೊಳಿಸಬೇಕಾದರೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಕೆಲಸದಲ್ಲಿ ವಿಳಂಬವಾದರೆ ಅಥವಾ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಹಲವು ಕಾಮಗಾರಿಗಳು ಅನುದಾನದ ಕೊರತೆ ಹಾಗೂ ನಾನಾ ಕಾರಣಗಳಿಂದ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗುತ್ತಿವೆ. ಕೂಡಲೇ ಸಂಬಂಧಪಟ್ಟ ಮೇಲುಸ್ತುವಾರಿ ಅಧಿಕಾರಿಗಳೊಂದಿಗೆ ಅಥವಾ ನಮ್ಮೊಂದಿಗೆ ಪತ್ರ ವ್ಯವಹಾರ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಅದಷ್ಟೇ ಅಲ್ಲದೇ ಅಧಿಕಾರಿಗಳೊಂದಿಗೆ ಚರ್ಚಿಸಿ ಬಾಕಿ ಇರುವ ಬಿಲ್ ಪಾವತಿ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿಕೊಂಡು ಯೋಜನೆಗಳ ಚಾಲನೆಗೆ ತರಬೇಕು ಎಂದರು.

ವಿಜಯನಗರ ಜಿಲ್ಲೆಯಾಗಿದ್ದರೂ ಇನ್ನೂ ಕೆಲವು ಕಚೇರಿಗಳು ಅಖಂಡ ಬಳ್ಳಾರಿ ಜಿಲ್ಲೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಸಾರ್ವಜನಿಕರಿಗೆ ಸಕಾಲದಲ್ಲಿ ಗುಣಮಟ್ಟದ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇಲಾಖೆಯ ಮುಖ್ಯಸ್ಥರೊಂದಿಗೆ ಪತ್ರ ವ್ಯವಹಾರ ನಡೆಸಿ ತಮಗೆ ಬೇಕಾದ ಕಟ್ಟಡ, ಕಚೇರಿ ಸ್ಥಳಾಂತರಕ್ಕೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆ. ವಿವಿಧ ಇಲಾಖೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಜಿಪಂ ಸಿಇಒ ಅಕ್ರಮ್ ಷಾ ಮಾತನಾಡಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಪಂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹33,777.93 ಲಕ್ಷ ಹಾಗೂ ತಾಪಂಗೆ ₹82787.39 ಲಕ್ಷ ಸೇರಿ ಒಟ್ಟು ₹1,16,565.32 ಲಕ್ಷ ಹಂಚಿಕೆ ಮಾಡಲಾಗಿದೆ. ಈ ಪೈಕಿ ಲೋಕೋಪಯೋಗಿ ಇಲಾಖೆಗೆ ₹600 ಲಕ್ಷ, ಶಿಕ್ಷಣ ಇಲಾಖೆ ₹81450.28 ಲಕ್ಷ, ಆರೋಗ್ಯ ಇಲಾಖೆಗೆ ₹1084.36 ಲಕ್ಷ, ಕುಟುಂಬ ಕಲ್ಯಾಣ ಇಲಾಖೆ ₹1452.33 ಲಕ್ಷ ಹೀಗೆ ಒಟ್ಟು 29 ಇಲಾಖೆಗಳಿಗೆ ₹1,16,565.32 ಲಕ್ಷ ಹಂಚಿಕೆ ಮಾಡಲಾಗಿದೆ. ಹಾಗೆಯೇ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಸದ್ಯ ಹೆಚ್ಚಿನ ನೀರಿನ ಸಮಸ್ಯೆಯಾಗಿದ್ದು, ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮಾದರಿ ಅಂಗನವಾಡಿ ಕಟ್ಟಡ ನಿರ್ಮಿಸಿ:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಆಯ್ದ ಐದು ಸ್ಥಳಗಳಲ್ಲಿ ಮಕ್ಕಳಿಗೆ ಆಟೋಟಕ್ಕೆ ಪೂರಕವಾಗಿರುವಂತೆ ಕ್ರೀಡಾ ಪರಿಕರ ಅಳವಡಿಸುವ ಮೂಲಕ ಉತ್ತಮವಾದ ಮಾದರಿ ಅಂಗನವಾಡಿ ಕಟ್ಟಡ ನಿರ್ಮಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ ನೀಡಿದರು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ಜಿಪಂ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಯೋಜನಾ ನಿರ್ದೇಶಕ ಅನ್ನದಾನಸ್ವಾಮಿ, ಗ್ರಾಮೀಣ ಕುಡಿಯುವ ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ಎಸ್. ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.