ಎರಡು ತಿಂಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ಮಾಡಿ

| Published : Aug 29 2025, 01:00 AM IST

ಎರಡು ತಿಂಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ಮಾಡಿ
Share this Article
  • FB
  • TW
  • Linkdin
  • Email

ಸಾರಾಂಶ

ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಆಗದ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದಿವೆ. ಅಲ್ಲದೇ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿರುವುದಿಲ್ಲ. ಮುಂದಿನ ಎರಡು ತಿಂಗಳಲ್ಲಿ ಹುಬ್ಬಳ್ಳಿ ಧಾರವಾಡ ಸ್ವಚ್ಛ ನಗರವಾಗಿಸಲು ಅಧಿಕಾರಿಗಳು ಕ್ರಮವಹಿಸಬೇಕು.

ಹುಬ್ಬಳ್ಳಿ: ತ್ಯಾಜ್ಯ ನಿರ್ವಹಣೆ ಕುರಿತಂತೆ ಹಲವಾರು ಬಾರಿ ಸಭೆಗಳನ್ನು ನಡೆಸಿದ್ದರೂ ಈವರೆಗೂ ಹುಬ್ಬಳ್ಳಿ-ಧಾರವಾಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಇನ್ನೆರಡು ತಿಂಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷ ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು.

ಇಲ್ಲಿನ ಸರ್ಕ್ಯೂಟ್ ಹೌಸ್‌ನಲ್ಲಿ ಘನ ತ್ಯಾಜ್ಯ, ಪಾರಂಪರಿಕ, ಪ್ಲಾಸ್ಟಿಕ್ ತ್ಯಾಜ್ಯ, ಕಟ್ಟಡ ತ್ಯಾಜ್ಯ, ಜೀವ ವೈದ್ಯಕೀಯ ತ್ಯಾಜ್ಯ (ನಿರ್ವಹಣೆ ನಿಯಮಗಳು) 2016 ಮತ್ತು ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ವಹಣೆ ವಿಷಯಗಳ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶವನ್ನು ಅನುಷ್ಟಾನಗೊಳಿಸುವ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಆಗದ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದಿವೆ. ಅಲ್ಲದೇ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿರುವುದಿಲ್ಲ. ಮುಂದಿನ ಎರಡು ತಿಂಗಳಲ್ಲಿ ಹುಬ್ಬಳ್ಳಿ ಧಾರವಾಡ ಸ್ವಚ್ಛ ನಗರವಾಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ತ್ಯಾಜ್ಯ ನಿರ್ವಹಣೆ ಕುರಿತು ವಿವಿಧ ಜಿಲ್ಲೆಗಳಲ್ಲಿ ಸಭೆ ಮಾಡಲಾಗಿದೆ. ಧಾರವಾಡ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾಕಷ್ಟು ಬದಲಾವಣೆ ಆಗಿವೆ. ಸ್ಮಾರ್ಟ್‌ಸಿಟಿ ಪಟ್ಟಿಗೆ ಹುಬ್ಬಳ್ಳಿ ಧಾರವಾಡ ಸೇರಿದರೂ ಸ್ವಚ್ಛತೆಗೆ ಆದ್ಯತೆ ನೀಡಿಲ್ಲ. ತ್ಯಾಜ್ಯ ನಿರ್ವಹಣೆ ಮಾಡದ ಅಂಗಡಿಗಳಿಗೆ 2ನೆಯ ಬಾರಿ ದಂಡ ವಿಧಿಸಿ, 3ನೇ ಬಾರಿಗೆ ಅಂಗಡಿಗಳ ವ್ಯಾಪಾರದ ಪರವಾನಗಿ ರದ್ದುಪಡಿಸುವಂತೆ ಸೂಚನೆ ನೀಡಿದರು.

ಪ್ಲಾಸ್ಟಿಕ್ ಮುಕ್ತ ವಲಯ ನಿರ್ಮಾಣವಾಗಲಿ: ಪಾಲಿಕೆಯ ವಲಯಗಳು ಪ್ಲಾಸ್ಟಿಕ್ ಮುಕ್ತವಾಗಬೇಕು. ಮೊದಲು ಮನೆಗಳನ್ನು ಸ್ವಚ್ಛ ಇಟ್ಟುಕೊಳ್ಳುವಂತೆ ಪ್ರೇರೇಪಿಸಬೇಕಾಗುತ್ತದೆ. ವಾರ್ಡ್‌ವಾರು ನಿವಾಸಿಗಳ ಸಭೆ ನಡೆಸಿ, ಸ್ವಚ್ಛತೆಯ ಅರಿವು ಮೂಡಿಸಬೇಕು. ಐಇಸಿ ( ಮಾಹಿತಿ, ಶಿಕ್ಷಣ ಮತ್ತು ಸಂವಹನ) ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕಾಗುತ್ತದೆ ಎಂದರು. ಪಾದಚಾರಿ ಮಾರ್ಗವನ್ನು ಅತಿಕ್ರಮಣ ತೆರವುಗೊಳಿಸಬೇಕು ಎಂದರು.

ಹಸಿರು ಕ್ಯಾಂಪಸ್: ಮಹಾನಗರದಲ್ಲಿ ಸಾಕಷ್ಟು ಶಾಲೆ ಕಾಲೇಜುಗಳಿವೆ. ಶಾಲಾ ಕಾಲೇಜುಗಳಲ್ಲಿ ಹಸಿರು ಕ್ಯಾಂಪಸ್ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸ್ವಚ್ಛ ಶಾಲೆಗಳಿಗೆ ರ‍್ಯಾಂಕಿಂಗ್ ನೀಡಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚಿಸಿದರು.

ಬಸ್ ನಿಲ್ದಾಣಗಳಲ್ಲಿ ಕಸ ಎಸೆದವರಿಗೆ ದಂಡ ವಿಧಿಸಬೇಕು. ನಿಲ್ದಾಣಗಳಲ್ಲಿ ಅವಶ್ಯತೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಸಾರಿಗೆ ಸಂಸ್ಥೆಯ ಅಧಿಕಾರಿ ಎಚ್. ರಾಮನಗೌಡರ ಅವರಿಗೆ ಸೂಚನೆ ನೀಡಿದರು.

ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿ, ಮಾಹಿತಿ ನೀಡಿದರು. ನೈಋತ್ಯ ರೈಲ್ವೆಯ ಎಡಿಆರ್‌ಎಂ ಪ್ರೇಮಚಂದ್ ಮಾತನಾಡಿ, ರೈಲ್ವೆ ನಿಲ್ದಾಣ, ರೈಲುಗಳಲ್ಲಿ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಪರಿಸರ ಅಧಿಕಾರಿ ಜಗದೀಶ ಸೇರಿದಂತೆ ಪಾಲಿಕೆಯ ವಲಯ ಆಯುಕ್ತರು, ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.