ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.

ಕನ್ನಡಪ್ರಭವಾರ್ತೆ ಬೆಂಗಳೂರು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.

ದುರ್ಗಮ್ಮ (38) ಪತಿಯಿಂದಲೇ ಭೀಕರವಾಗಿ ಕೊಲೆಯಾದವರು. ಬಸವರಾಜ್‌ (40) ಕೊಲೆ ಆರೋಪಿ. ಇವರು ರಾಯಚೂರಿನ ಮಾನ್ವಿ ತಾಲೂಕಿನ ನಿವಾಸಿಗಳು. ಸುಮಾರು 19 ವರ್ಷದ ಹಿಂದೆ ದುರ್ಗಮ್ಮ ಮತ್ತು ಬಸವರಾಜ್ ವಿವಾಹವಾಗಿದ್ದು, ಇವರಿಗೆ ಎರಡು ಮಕ್ಕಳಿವೆ. ಕೆಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಕೊಳತೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ದುರ್ಗಮ್ಮ ಹೌಸಿಂಗ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಒಬ್ಬ ಮಗ ಬುದ್ದಿಮಾಂದ್ಯನಾಗಿದ್ದು, ಮತ್ತೊಬ್ಬ ಕೆಲಸಕ್ಕೆ ಹೋಗುತ್ತಿದ್ದಾನೆ.

ಪತಿ-ಪತ್ನಿ ಮಧ್ಯೆ ಆಗಾಗ್ಗೆ ಕೌಟುಂಬಿಕ ವಿಚಾರದಲ್ಲಿ ಜಗಳ ನಡೆಯುತ್ತಿತ್ತು. ಭಾನುವಾರ ರಾತ್ರಿ 12.30ರ ಸುಮಾರಿಗೆ ಇಬ್ಬರ ನಡುವೆ ಜಗಳ ಉಂಟಾಗಿ ಆರೋಪಿ ಬಸವರಾಜ್ ಕೊಡಲಿಯಿಂದ ದುರ್ಗಮ್ಮ ಅವರ ತಲೆ ಹಾಗೂ ಮುಂತಾದ ಭಾಗಗಳಿಗೆ ಹೊಡೆದು ಕೊಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಒಬ್ಬ ಮಗ ಸಂಬಂಧಿಕರ ಮನೆಗೆ ಹೋಗಿದ್ದ. ಘಟನೆ ನಡೆದ ಸಂದರ್ಭದಲ್ಲಿ ಮತ್ತೊಬ್ಬ ಮಗ ಜೋರಾಗಿ ಕೂಗಿಕೊಂಡಿದ್ದು, ಆತಂಕಗೊಂಡ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಮಾರತಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸಿದ್ದಾರೆ.