ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

| Published : Nov 13 2024, 12:08 AM IST

ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆಗಳು ಕಂಡು ಬಂದರೆ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದರು. ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆಗಳನ್ನು ನಾನು ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಅಸಡ್ಡೆ ತೋರಿದ ಅಧಿಕಾರಿಗಳು ಅಮಾನತ್ತಿನ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಡಿಸೆಂಬರ್ 2ರಂದು ಸಿಎಂ ಭೇಟಿ :

ಇದಕ್ಕೂ ಮುನ್ನ ಜಿಲ್ಲೆಗೆ ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಕ್ರಮಕೈಗೊಳ್ಳಬೇಕು. ಕಳೆದ ಅಕ್ಟೋಬರ್‌ನಲ್ಲಿ ಜರುಗಿದ ದಸರಾ ಉತ್ಸವವನ್ನು ಯಶಸ್ವಿಗೊಳಿಸಿದಂತೆ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನೂ ಸಹ ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಖ್ಯ ಮಂತ್ರಿಗಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಾರ್ಮಿಕ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲು ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರಲ್ಲದೆ, ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರತಿಯೊಂದು ಇಲಾಖೆಗೂ ಕೋಟ್ಯಂತರ ರೂ.ಗಳ ಅನುದಾನವನ್ನು ಒದಗಿಸಿದ್ದರೂ ಸೌಲಭ್ಯಗಳು ನಿರೀಕ್ಷಿತ ಮಟ್ಟದಲ್ಲಿ ಫಲಾನುಭವಿಗಳನ್ನು ತಲುಪುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸವಲತ್ತುಗಳನ್ನು ಸಕಾಲಕ್ಕೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಹಾಗೂ ಕರ್ತವ್ಯ. ಆಯವ್ಯಯದನ್ವಯ ಮೀಸಲಿಟ್ಟ ಹಣವನ್ನು ನಿರ್ದಿಷ್ಟ ಯೋಜನೆಗಳಿಗೆ ವೆಚ್ಚ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು. ಕಳೆದ ಬಾರಿ ನಗರದಲ್ಲಿ ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ತುಮಕೂರು ಕಾರ್ಯಕ್ರಮವನ್ನು ಉದಾಹರಿಸಿ ಪ್ರಸ್ತಾಪಿಸಿದ್ದಾರೆ. ಈ ಬಾರಿಯೂ ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಬೇಕೆಂದರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಮುಖ್ಯಮಂತ್ರಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರಲ್ಲದೆ, ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕಟ್ಟಡದ ತಾರಸಿ ಮೇಲ್ಭಾಗದಲ್ಲಿ ಮರದ ಎಲೆಗಳು ಬಿದ್ದು ಸ್ವಚ್ಛಗೊಳಿಸದೆ ಮಳೆ ನೀರು ನಿಂತು ಕಟ್ಟಡಗಳ ಮೇಲ್ಚಾವಣಿ ಬೀಳುವ ದುಸ್ಥಿತಿಗೆ ತಲುಪುತ್ತಿವೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಅಭಿಯಾನದಡಿ ಕಚೇರಿ ಕಟ್ಟಡಗಳ ಮೇಲ್ಚಾವಣಿ ಹಾಗೂ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಸುಮಾರು 30 ಸಾವಿರ ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ 1.30ಲಕ್ಷ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸವಲತ್ತುಗಳ ವಿತರಣೆ ಮಾಡಲು ಯೋಜಿಸಲಾಗಿದೆ. ಸುಮಾರು 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸವಲತ್ತುಗಳ ವಿತರಣೆ, ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.