ಸಾರಾಂಶ
ಹಾವೇರಿ: ಮತದಾನ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಲು ಮಕ್ಕಳು ಸಹಕಾರಿ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ೧೮ ವರ್ಷ ಪೂರೈಸಿದ ಪ್ರತಿ ಪ್ರಜೆಯೂ ಮತದಾನ ಮಾಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೇ. ನೂರರಷ್ಟು ಮತದಾನದ ಗುರಿಯೊಂದಿಗೆ ಜಿಲ್ಲೆಯಲ್ಲಿ ವಿಶಿಷ್ಟ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತೋರುಬೆರಳಿನಾಕೃತಿಯ ಮಾನವ ಸರಪಳಿ ರಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಜಿಲ್ಲೆಯಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶೇ. ೭೫ರಷ್ಟು ಮತದಾನವಾಗಿದೆ. ಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷವ್ಯಾಕದೊಂದಿಗೆ ನೂರಕ್ಕೆ ನೂರರಷ್ಟು ಮತದಾನ ಗುರಿ ಹಾಕಿಕೊಂಡರೆ ಶೇ. ೯೦ರಷ್ಟು ಪ್ರಗತಿ ಸಾಧಿಸಬಹುದಾಗಿದೆ ಎಂದರು.ಆಕರ್ಷಕ ಬೆರಳಾಕೃತಿ: ಮತದಾರರ ದಿನಾಚರಣೆ ಅಂಗವಾಗಿ ನಗರದ ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮತದಾನದ ನಂತರ ಎಡಗೈ ತೋರು ಬೆರಳಿಗೆ ಶಾಯಿ ಹಾಕುವ ಗುರುತಾಗಿ ತೋರು ಬೆರಳಿನಾಕೃತಿಯಲ್ಲಿ ಮಾನವ ಸರಪಳಿ ರಚಿಸಿ ಗಮನ ಸೆಳೆದರು.
ವಿವಿಧ ಶಾಲೆಗಳ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮತದಾನದ ಹಕ್ಕು ಮತ್ತು ಅರಿವು ಕುರಿತಂತೆ ಜಾಗೃತಿ ಮೂಡಿಸಲು ಮಾನವ ಸರಪಳಿ ರಚಿಸಿದರು.ಮಾನವ ಸರಪಳಿ: ಪಿಯುಸಿ ವಿದ್ಯಾರ್ಥಿಗಳಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಾಷ್ಟ್ರೀಯ ಮತದಾರರ ದಿನಾಚರಣೆ ಜಾಗೃತಿ ಮೂಡಿಸಿದರು. ಹೊಸಮನಿ ಸಿದ್ದಪ್ಪ ವೃತ್ತದಿಂದ ಗುರುಭವನದ ವರೆಗೆ ಜಾಥಾ ನಡೆಸಲಾಯಿತು. ಜಾಥಾಕ್ಕೆ ಉಪವಿಭಾಗಾಧಿಕಾರಿ ಚೆನ್ನಪ್ಪ ಅವರು ಚಾಲನೆ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಮೇಶಪ್ಪ, ಡಯಟ್ ಪ್ರಾಚಾರ್ಯ ಗಿರೀಶ ಪದಕಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್. ರಂಗನಾಥ್, ಡಯಟ್ ಉಪನ್ಯಾಸಕ ಎಸ್.ಎಸ್. ಅಡಿಗ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭರತ ಹೆಗಡೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಇತರರು ಉಪಸ್ಥಿತರಿದ್ದರು.