ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲಾಮಟ್ಟದಲ್ಲಿ ಭಗೀರಥ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಡಿ.10ರಂದು ಬೆಳಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಂಘದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್.ಮಂಜುನಾಥ್ ಹೇಳಿದರು.ನಗರದ ಪ್ರೆಸ್ ಟ್ರಸ್ಟ್‌ನಲ್ಲಿ ಶನಿವಾರ ಸಂಘದ ಅಧ್ಯಕ್ಷ ಎನ್.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಸಹಿತ ಗಣ್ಯರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಶೇ.90ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 50 ವರ್ಷ ದಾಂಪತ್ಯವನ್ನು ಪೂರೈಸಿದ "ದಂಪತಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರಿದ್ದಾರೆ. ಸಹಕಾರ ಸಂಘವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಗುರಿ ಇದೆ. ಭಗೀರಥ ಸಮಾಜ ಅತ್ಯಂತ ಹಿಂದುಳಿದಿರುವುದರಿಂದ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಉನ್ನತಿಗೇರಬೇಕಾದ ಅವಶ್ಯಕತೆ ಹೆಚ್ಚಿದೆ. ಆದ್ದರಿಂದ ಜಿಲ್ಲಾಮಟ್ಟದಲ್ಲಿ ಶ್ರೀ ಭಗೀರಥ ಸಹಕಾರ ಸಂಘದ ಸುದೀರ್ಘ ಪ್ರಯತ್ನದ ನಂತರ ಅಸ್ತಿತ್ವಕ್ಕೆ ಬಂದಿದೆ ಎಂದರು.
ಶ್ರೀ ಭಗೀರಥ ಸಹಕಾರ ಸಂಘ ನಿಯಮಿತದ ವತಿಯಿಂದ ಜಿಲ್ಲೆಯ ಎಲ್ಲಾ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿ ಸಮಾಜದ ಬಂದುಗಳನ್ನು ಸಂಘದ ನಿರ್ದೇಶಕ ಮಂಡಳಿ ಭೇಟಿ ಮಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಷೇರು ಸಂಗ್ರಹಿಸಲಾಗಿದೆ ಎಂದರು.ಸಹಕಾರ ಸಂಘದ ಪ್ರತಿ ಷೇರಿನ ಮುಖಬೆಲೆ ₹1000 ಹಾಗೂ ಪ್ರವೇಶಧನ ₹200 ಮತ್ತು ಷೇರು ಫೀ ₹50 ನಿಗದಿ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಸಹಕಾರಿ ಧುರೀಣರನ್ನು ಆಹ್ವಾನಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ವಸಂತ ಹೋಬಳಿದಾರ್, ಎಲ್.ಮಂಜುನಾಥ್, ಚಿದಾನಂದ ಜಿ., ಎಚ್.ರವಿ, ಅರ್ಚನಾ, ಕೆ.ಶ್ರೀನಿವಾಸ್, ಎಲ್.ಚಂದ್ರಶೇಖರ್ ಮತ್ತಿತರರು ಇದ್ದರು.;Resize=(128,128))
;Resize=(128,128))
;Resize=(128,128))