ಸೋಮವಾರಪೇಟೆ: ಅಗ್ನಿಶಾಮಕ ಠಾಣೆ ಕಟ್ಟಡ ಉದ್ಘಾಟನೆ

| Published : Jan 28 2025, 12:48 AM IST

ಸಾರಾಂಶ

ಅಗ್ನಿಶಾಮಕ ಕಟ್ಟಡವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು. ಅಗ್ನಿ ಶಾಮಕ ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಅನುದಾನಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ಸೋಮವಾರಪೇಟೆಯ ಆರ್‌ಎಂಸಿ ಮಾರುಕಟ್ಟೆ ಆವರಣದಲ್ಲಿ ೩ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಅಗ್ನಿಶಾಮಕ ಠಾಣಾ ಕಟ್ಟಡವನ್ನು ಶಾಸಕ ಡಾ.ಮಂತರ್‌ಗೌಡ ಸೋಮವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಬೆಂಕಿ ಅನಾಹುತ ಸಂಭವಿಸಿದ ಸಂದರ್ಭ ಸೂಕ್ತ ಸಮಯದಲ್ಲಿ ಸ್ಥಳಕ್ಕೆ ತಲುಪಿಸಲು ಸುಸಜ್ಜಿತ ವಾಹನಗಳು ಬೇಕಾಗಿವೆ. ಈ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ ಅಗ್ನಿಶಾಮಕ ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಅನುದಾನಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಅರಣ್ಯವನ್ನು ರಕ್ಷಿಸಬೇಕಾದ ಗುರುತರ ಜವಾಬ್ದಾರಿ ಇಲಾಖೆಗಳ ಮೇಲಿದೆ. ಸಾರ್ವಜನಿಕರ ಸಹಕಾರ ಪಡೆದು ಕೆಲಸ ಮಾಡಬೇಕು ಎಂದು ಹೇಳಿದರು.

ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಮೈಸೂರು ಪ್ರಾಂತ್ಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಪ್ರಾದೇಶಿಕ ಅಧಿಕಾರಿ ಪಿ. ಚಂದನ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ರಾಜೇಶ್ ಇದ್ದರು.

೨೭ಎಸ್‌ಪಿಟಿ೦೪: ಸೋಮವಾರಪೇಟೆ ಆರ್‌ಎಂಸಿ ಮಾರುಕಟ್ಟೆ ಆವರಣದಲ್ಲಿ ನಿರ್ಮಾಣವಾಗಿರುವ ಆಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು. ಗೀತಾ, ಜಯಂತಿ, ಜಯರಾಮಯ್ಯ, ಚಂದನ್ ಇದ್ದರು.