ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಮಿಮ್ಸ್)ಯಲ್ಲಿ ನೂತನವಾಗಿ ನಿರ್ಮಿಸಿರುವ ಅತ್ಯಾಧುನಿಕ ಲಿಫ್ಟ್, ನೂತನ ಶೌಚಾಲಯ ಬ್ಲಾಕ್, ಮಕ್ಕಳ ಚಿಕಿತ್ಸಾ ವಿಭಾಗದ ಕಟ್ಟಡದ ಮೇಲ್ಚಾವಣಿ ನವೀಕರಣ, ಮಕ್ಕಳ ಆಟದ ವಲಯ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಲೋಕಾರ್ಪಣೆಗೊಳಿಸಿದರು.ಕೇಂದ್ರ ಸರ್ಕಾರದ ಬಿಎಚ್‌ಇಎಲ್ ನೀಡಿರುವ ೧.೫ ಕೋಟಿ ರು. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅನುದಾನದಲ್ಲಿ ಜನೋಪಕಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಜಿಲ್ಲಾಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವವರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಕಳೆದ ೧೨ ವರ್ಷಗಳ ಅವರ ಜನಪರ ಆಡಳಿತದಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ನಿರ್ಮಾಣ ಮತ್ತು ಸುಧಾರಣೆಗೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಗತ್ತಿನಲ್ಲಿಯೇ ಅತಿದೊಡ್ಡ ಆರೋಗ್ಯ ವಿಮೆ ಯೋಜನೆ ಅನುಷ್ಠಾನ ಮಾಡಲಾಗಿದೆ. ಆರೋಗ್ಯವಂತ ಮತ್ತು ಸಶಕ್ತ ಭಾರತ ನಿರ್ಮಾಣಕ್ಕೆ ಕೇಂದ್ರವು ಬದ್ಧವಾಗಿದೆ ಎಂದು ನುಡಿದರು.ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಪಂ ಆರಕ್ಷಕ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ ಸೇರಿದಂತೆ ಇತರ ಮಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳಿದ್ದರು.
ನಗರಸಭೆಯಲ್ಲಿ ಚಾರ್ಸಿ ಮೌಂಟೆಡ್ ಸ್ವೀಪಿಂಗ್ ವಾಹನಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ಮಂಡ್ಯಮಂಡ್ಯ ನಗರಸಭೆಗೆ ಕೇಂದ್ರ ಸರ್ಕಾರದ ೧೫ನೇ ಹಣಕಾಸು ಪುರಸ್ಕೃತ ಯೋಜನೆಯಡಿ ದೊರೆತಿರುವ ಚಾರ್ಸಿ ಮೌಂಟೆಡ್ ಸ್ವೀಪಿಂಗ್ ವಾಹನಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಚಾಲನೆ ನೀಡಿದರು.
ಕೇಂದ್ರ ಸರ್ಕಾರ ಹಲವು ಮಹತ್ವಾಕಾಂಕ್ಷೆಯ ಯೋಜನೆಗಳ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಹಾಗೂ ಯೋಜನೆಗಳು ಬಡ ಕುಟುಂಬಗಳಿಗೆ ದೊರಕುವ ನಿಟ್ಟಿನಲ್ಲಿ ಕಾರ್ಯ ರೂಪಕ್ಕೆ ತರಲಾಗುತ್ತಿದೆ. ದೇಶದ ಅಭಿವೃದ್ಧಿ ಜೊತೆಗೆ ೨೦೪೭ಕ್ಕೆ ವಿಕಸಿತ ಭಾರತವನ್ನು ಮಾಡುವ ದೃಷ್ಟಿಕೋನ ಇಟ್ಟುಕೊಂಡು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಶಾಸಕರಾದ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ನಗರಸಭೆ ಆಯುಕ್ತೆ ಯು.ಪಿ.ಪಂಪಾಶ್ರೀ ಉಪಸ್ಥಿತರಿದ್ದರು.