ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಅಡಚಣೆರಹಿತ ವಿದ್ಯುತ್ ಪೂರೈಕೆ ಮಾಡುವುದೇ ವಿದ್ಯುತ್ ಉಪ ಕೇಂದ್ರ ಯೋಜನೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.ನಗರಸಭೆ ವ್ಯಾಪ್ತಿಯ ಗಾಳೀಪುರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 1027.31 ಲಕ್ಷ ರು. ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 1.82 ಕಿ.ಮೀ ಗಳ 66/11 ಕೆ.ವಿ. ವಿದ್ಯುತ್ ಮಾರ್ಗಕ್ಕೆ ಕಟ್ಟಡದ ವಿದ್ಯುತ್ ಯಂತ್ರದ ಬಟನ್ ಒತ್ತುವ ಮೂಲಕ ಉಪ ಕೇಂದ್ರದ ಕಾರ್ಯನಿರ್ವಹಣೆಗೆ ಚಾಲನೆ ನೀಡಿ ಮಾತನಾಡಿದರು.
ಈ ವಿದ್ಯುತ್ ಉಪ ಕೇಂದ್ರದಿಂದ ಚಾಮರಾಜನಗರ ತಾಲೂಕಿನ ಸೋಮವಾರಪೇಟೆ, ಗಾಳೀಪುರ, ಮಲ್ಲಯ್ಯನಪುರ, ಮೂಡಲುಪುರ, ಉತ್ತವಳ್ಳಿ, ಯಡಪುರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಹರದನಹಳ್ಳಿ, ಟಿ.ಕೆ. ಮೋಳೆ, ಗ್ರಾಮಗಳ ವಿದ್ಯುತ್ ವೋಲ್ಟೇಜ್ ಸ್ಥಿತಿ ಸುಧಾರಿಸುವುದು ಎಂದರು.ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ರೈತರು ಕೃಷಿ ಚಟುವಟಿಕೆಗಳಿಗೆ ಹಾಗೂ ಸಾರ್ವಜನಿಕರಿಗೆ ವಿದ್ಯುತ್ ಪೂರೈಕೆ ಮಾಡುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಸೋಲಾರ್ ಪ್ಯಾನಲ್‌ಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸಲಾಗುತ್ತದೆ. ಇದರಿಂದ ನಮಗೆ ಅಗತ್ಯವಿರುವಷ್ಟು ಪ್ರಮಾಣದ ವಿದ್ಯುತ್ ಬಳಸಿಕೊಂಡು ಉಳಿಕೆ ವಿದ್ಯುತ್ ಅನ್ನು ಅಗತ್ಯವಿರುವ ಇತರರಿಗೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯಡಿ ಸೋಲಾರ್ ಪ್ಯಾನಲ್‌ಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸಿ ಜಿಲ್ಲೆಯ ರೈತರ ಕೃಷಿ ಚಟುವಟಿಕೆಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ 3-ಫೀಜ್ ವಿದ್ಯುತ್ ಒದಗಿಸಲು ಅನುಕೂಲವಾಗಲಿದೆ. ಇದಕ್ಕಾಗಿ ಜಿಲ್ಲಾಡಳಿತದಿಂದ 140 ಎಕರೆ ಜಾಗವನ್ನು ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.ಸಂಸದ ಸುನಿಲ್ ಬೋಸ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು