ರಾಜ್ಯ ಸರ್ಕಾರವು ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ರಾಜ್ಯ ಸರ್ಕಾರವು ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಒತ್ತಾಯಿಸಿದರು.

ಇಲ್ಲಿನ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸೋಮವಾರ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ಜು.1ರಿಂದಲೇ ಅನ್ವಯಿಸುವಂತೆ ನೌಕರರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಏರಿಕೆ ಮಾಡಿದೆ. ಸಂಘ ನೌಕರರ ಹಿತರಕ್ಷಣೆಗೆ ಶ್ರಮಿಸುತ್ತ ಬಂದಿದೆ. ನೌಕರರ ಅನೇಕ ಬೇಡಿಕೆ ಈಡೇರಿಕೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಹೇಳಿದರು.

ಹಿಂದಿನ ಕಾರ್ಯಕಾರಿ ಸಮಿತಿ ಸಭೆಯ ನಡಾವಳಿ ಓದಿದ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ ಅವರು, ರಾಜ್ಯ ಸರ್ಕಾರ ಹೊಸ ಪಿಂಚಣಿ ಯೋಜನೆ ಬದಲು ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಸಂಬಂಧ ರಚಿಸಿದ್ದ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಕೂಡಲೇ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತು ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಡಾ. ಶಂಕರ ದೇಶಮುಖ ವಿಶೇಷ ಉಪನ್ಯಾಸ ನೀಡಿದರು. ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ ಅವರು, ಸಂಘದ ಬಲವರ್ಧನೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜನೆ ಕುರಿತು ಮಾತನಾಡಿದರು. ಜಿಲ್ಲಾ ಖಜಾಂಚಿ ದೇವಪ್ಪ ಚಾಂಬೋಳೆ ವಾರ್ಷಿಕ ಲೆಕ್ಕ ಪತ್ರದ ವರದಿ ಮಂಡಿಸಿ, ಅನುಮೋದನೆ ಪಡೆದರು. ಸಂಘದ ಜಿಲ್ಲಾ ಗೌರವಾಧ್ಯಕ್ಷ ಸೂರ್ಯಕಾಂತ ಬಿರಾದಾರ, ಕಾರ್ಯಾಧ್ಯಕ್ಷ ಶಿವರಾಜ ಕಪಲಾಪುರೆ, ಉಪಾಧ್ಯಕ್ಷರಾದ ಶ್ರೀಕಾಂತ ಪಾಟೀಲ, ಮಕರಂದ ಕುಲಕರ್ಣಿ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಸುನೀಲಕುಮಾರ ಕಸ್ತೂರೆ, ಚಂದ್ರಕಾಂತ ಬನ್ನಾಳೆ, ನಾಗರಾಜ ಹಾವಣ್ಣ, ಪಂಢರಿ ಆಡೆ, ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು, ನಿರ್ದೇಶಕರು, ನಾಮ ನಿರ್ದೇಶಿತ ನಿರ್ದೇಶಕರು, ನೌಕರರು ಪಾಲ್ಗೊಂಡಿದ್ದರು.