ನಾಯಿ ಕಡಿತ ಪ್ರಕರಣಗಳು ಹೆಚ್ಚಳ: ತ್ವರಿತ ಚಿಕಿತ್ಸೆಗೆ ಸೂಚನೆ

| Published : May 07 2025, 12:47 AM IST

ನಾಯಿ ಕಡಿತ ಪ್ರಕರಣಗಳು ಹೆಚ್ಚಳ: ತ್ವರಿತ ಚಿಕಿತ್ಸೆಗೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಬಗ್ಗೆ ವರದಿಯಾಗಿದ್ದು, ಪ್ರಕರಣಗಳು ವರದಿಯಾದ ಕೂಡಲೇ ನಾಯಿ ಕಡಿತಕ್ಕೊಳಗಾದವರಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಅಗತ್ಯ ಔಷಧಿಯನ್ನು ದಾಸ್ತಾನು ಇಟ್ಟುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಬಗ್ಗೆ ವರದಿಯಾಗಿದ್ದು, ಪ್ರಕರಣಗಳು ವರದಿಯಾದ ಕೂಡಲೇ ನಾಯಿ ಕಡಿತಕ್ಕೊಳಗಾದವರಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಅಗತ್ಯ ಔಷಧಿಯನ್ನು ದಾಸ್ತಾನು ಇಟ್ಟುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಜನವರಿಯಿಂದ ಏಪ್ರಿಲ್ ಮಾಹೆವರೆಗೂ 6841 ನಾಯಿ ಕಡಿತ ಹಾಗೂ 111 ಹಾವು ಕಡಿತ ಪ್ರಕರಣಗಳು ದಾಖಲಾಗಿವೆ. ಹಾವು ಕಡಿತ ಮತ್ತು ನಾಯಿ ಕಡಿತ ಪ್ರಕರಣಗಳಿಗೆ ತ್ವರಿತ ಚಿಕಿತ್ಸೆ ನೀಡಲು ಜಿಲ್ಲೆಯ ಎಲ್ಲಾ ಸಾರ್ವಜನಿಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಗಳ ದಾಸ್ತಾನು ಇರಬೇಕು ಎಂದು ತಿಳಿಸಿದರು.ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಸವಾಲುಗಳಾಗಿದ್ದು, ಶುದ್ಧತೆಯ ಪಾಲನೆ, ತಕ್ಷಣ ವೈದ್ಯಕೀಯ ನೆರವು, ಗ್ರಾಮ ಹಾಗೂ ವಾರ್ಡುಗಳ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು ಎಂದು ಸಲಹೆ ನೀಡಿದರು.ಜಿಲ್ಲೆಯ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಸ್ವಚ್ಛತೆ ಕಾರ್ಯಗಳ ಪರಿಶೀಲನೆ ಮಾಡಬೇಕು. ಮನೆಗಳ ಸುತ್ತ-ಮುತ್ತಲಿನ ಪ್ರದೇಶಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಪ್ರತಿ ದಿನ ಫಾಗಿಂಗ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರ ಶೇಖರ್ ಬಿ.ಎಂ., ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ. ರಾಮೇಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.