ಸಾರಾಂಶ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ದಿ ಯೋಜನೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಇವುಗಳ ಸಹಯೋಗದಲ್ಲಿ ಶನಿವಾರ ಪುತ್ತೂರಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ದೇಶದಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವಿನ ನಡುವೆ ಅನುಪಾತ ಹೆಚ್ಚಾಗಿದ್ದು ಇದು ಅಪಾಯಕಾರಿ ಬಳವಣಿಗೆಯಾಗಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ದಿ ಯೋಜನೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಇವುಗಳ ಸಹಯೋಗದಲ್ಲಿ ಶನಿವಾರ ಪುತ್ತೂರಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಯಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿ ಎಂದರೆ ಕೇವಲ ತಂತ್ರಜ್ಞಾನಗಳಿಂದ ಮಾತ್ರ ದೇಶದ ಅಭಿವೃದ್ಧಿಯನ್ನು ಕಾಣುವುದು ಸಾಧ್ಯವಿಲ್ಲ. ಹೆಣ್ಣು ಮಕ್ಕಳು ಹೆಚ್ಚು ವಿದ್ಯಾವಂತರಾಗಿ ಸ್ವಾಭಿಮಾನ ಮತ್ತು ಸಬಲೀಕರಣ ಪಡೆಯುವುದೇ ದೇಶದ ಅಭಿವೃದ್ಧಿಯಾಗಿದೆ. ಪ್ರತಿ ಕುಟುಂಬದ ಹೆಣ್ಣು ಮಕ್ಕಳೂ ಶಿಕ್ಷಣವನ್ನು ಪಡೆಯಬೇಕು. ಈ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸುವಲ್ಲಿ ಹೆತ್ತವರು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಯತ್ನ ಹೆಚ್ಚಾಗಬೇಕು. ಹೆಣ್ಣು ಯಾವ ಸಾಧನೆಯನ್ನು ಮಾಡುವುದಕ್ಕೂ ಶಕ್ತಿವಂತರಾಗಿದ್ದಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಕಲಿಕೆಯಲ್ಲಿ ಹೆಣ್ಣು ಮಕ್ಕಳು ಮುಂದೆ ಇದ್ದಾರೆ. ಆದರೆ ಅವರಿಗೆ ಶಿಕ್ಷಣ ನೀಡುವ ಮನೋಭಾವ ರೂಡಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದೆ. ಕುಟುಂಬದ ಮಹಿಳೆ ಶಿಕ್ಷಣವಂತರಾದರೆ ಪ್ರತಿಯೊಂದು ಕುಟುಂಬವೂ ಶಕ್ತಿಯುತವಾದ ಶ್ರೇಯಸ್ಸನ್ನು ಪಡೆಯುತ್ತದೆ ಎಂದು ಹೇಳಿದರು.ಶಾಲಾ ಮುಖ್ಯ ಶಿಕ್ಷಕಿ ರೋಸ್ಲಿ ಪ್ಲೇವಿ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಶೈಲಜಾ ಭಟ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಭಟ್, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಮಕ್ಕಳ ರಕ್ಷಣಾ ಘಟಕದ ಸಂಯೋಜಕ ವಝೀರ್ ಅಹಮದ್ ಉಪಸ್ಥಿತರಿದ್ದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳಾ ಸ್ವಾಗತಿಸಿದರು. ಮೇಲ್ವಿಚಾರಕಿ ವನಿತಾ ವಂದಿಸಿದರು. ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.