ಸಾರಾಂಶ
ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮ ಬೀರುತ್ತದೆ
ಬಳ್ಳಾರಿ: ಇತ್ತೀಚೆಗೆ ಯುವಜನತೆ ಮಾದಕ ವಸ್ತು ಸೇವನೆ ಮಾಡುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಹೊಸಮನೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ "ಸಾಕ್ಷಿಗಳು ಸ್ಪಷ್ಟವಾಗಿವೆ, ತಡೆಗಟ್ಟುವ ಬಗ್ಗೆ ಗಮನವಹಿಸಿ” ಎಂಬ ಧ್ಯೇಯವಾಕ್ಯದೊಂದಿಗೆ ನಗರದ ಬಿಐಟಿಎಂ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳು ವಿವಿಧ ರೂಪದಲ್ಲಿ ದೊರೆಯುತ್ತಿದ್ದು, ಹೊರ ದೇಶಗಳಿಂದಲೂ ಕಳ್ಳ ಸಾಗಣೆಯಾಗುತ್ತಿದೆ. ಇದರ ಸೇವನೆ ಹಾಗೂ ಕಳ್ಳ ಸಾಗಣೆ ಮಾಡುವುದು ಅಪರಾಧವಾಗಿದ್ದು, ಈ ಅಪರಾಧದಲ್ಲಿ ಪಾಲ್ಗೊಂಡರೆ ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.
ಎಸ್ಪಿ ರಂಜಿತಕುಮಾರ್ ಬಂಡಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯಕ್ರಮ ವಿದ್ಯಾಭ್ಯಾಸದ ಜೊತೆಗೆ ಮಾನಸಿಕ ಆರೋಗ್ಯವು ಕಾಪಾಡಿಕೊಳ್ಳುವುದು ತುಂಬ ಮುಖ್ಯವಾಗಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಶಿಸ್ತಿನ ಜೀವನ ಹಾಗೂ ಆರೋಗ್ಯಕರ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋರೋಗ ತಜ್ಞ ಡಾ.ರೋಹನ್ ವನಗುಂದಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ ಬಾಬು, ಬಿಐಟಿಎಂ ಕಾಲೇಜಿನ ಪ್ರಾಂಶುಪಾಲ ಯಡವಳ್ಳಿ ಬಸವರಾಜ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ವೀರೇಂದ್ರ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿಯಾಂತ್ರಣಾಧಿಕಾರಿ ಡಾ.ಇಂದ್ರಾಣಿ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಈಶ್ವರ್ ದಾಸಪ್ಪನವರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಸಿಬ್ಬಂದಿ ಶರ್ಮಸ್ ವಲಿ.ಪಿ., ಶಾಂತಕುಮಾರ್ ಎಚ್., ರಂಜಿತಾ ಜಿ., ಸಾಹೇರಬಾನು, ನಿರಂಜನ, ರಮೇಶ್ ಬಾಬು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.