ಸಾರಾಂಶ
ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸ್ಥಳೀಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಭಾರತ್ ಸ್ಟೇಷನ್ ಕಾಮಗಾರಿ ಪರಿಶೀಲನೆ ನಡೆಸಿದರು
ಕನ್ನಡಪ್ರಭ ವಾರ್ತೆ ರಾಯಚೂರು
ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸ್ಥಳೀಯ ರೈಲ್ವೆ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿ, ಭಾರತ್ ಸ್ಟೇಷನ್ ಕಾಮಗಾರಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿ, ಕಾಮಗಾರಿಯು ಗುಣಮಟ್ಟ ಹಾಗೂ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ನಗರದ ಜನರ ಬೇಡಿಕೆಗೆ ಅನುಗುಣವಾಗಿ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯ ಹೆಚ್ಚಿಸಿ, ಪ್ರಯಾಣಿಕರ ಸೌಕರ್ಯ, ಅನುಕೂಲ, ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ಪಾರ್ಕಿಂಗ್, ಮಕ್ಕಳಿಗಾಗಿ ಆಟದ ವಲಯ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಸ್ಥಳಾವಕಾಶಗಳ ಇರಲಿದೆ. ಸಾರ್ವಜನಿಕರಿಂದ ಯಾವುದೇ ದೂರಗಳು ಬರದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಬಂಧಿಸಿದ ರೈಲ್ವೆ ಡಿಆರ್‌ಎಂ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಸಲಹಾ ಸಮಿತಿ ರಚಿಸಿ ಚರ್ಚಿಸಿ ಸ್ಥಳೀಯ ಮಟ್ಟದಲ್ಲಿ ಕೆಲ ತೀರ್ಮಾನ ತಗೆದುಕೊಳ್ಳಬೇಕು. ಅವರಿಂದ ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲ ಆಗುವಂತೆ ಕಾರ್ಯಕ್ರಮ ರೂಪಿಸಲು ಸಾಧ್ಯವಾಗಲಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡದರು.ಈ ವೇಳೆ ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಮುಖಂಡರಾದ ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ,ಬಾಬುರಾವ್ ಬಂಡೇಶ ವಲ್ಕಂದಿನ್ನಿ ಸೇರಿ ರೈಲ್ವೆ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ, ಪಕ್ಷದವರು ಇದ್ದರು.