ಸಾರಾಂಶ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯುವನಿಧಿ ಯೋಜನೆಯ ನೋಂದಣಿ ಕುರಿತು ಮಾತನಾಡಿದರು.
ಇಲ್ಲಿಯವರೆಗೆ 4,678 ಫಲಾನುಭವಿಗಳು ನೋಂದಣಿಯಾಗಿದ್ದು, ಇದರಲ್ಲಿ 4,830 ಫಲಾನುಭವಿಗಳಿಗೆ ಪುನರಾವರ್ತನೆ ಒಳಗೊಂಡಂತೆ ನೇರ ನಗದು ಡಿಬಿಟಿ ಮೂಲಕ ಜನವರಿ ತಿಂಗಳಿಂದ ಮೇ ತಿಂಗಳವರೆಗೆ ₹1,44,73,500 ಜಮಾ ಆಗಿದೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ 2022-23ರಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯ ಯುವಜನತೆಗೆ ಇದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಆಧಿಕಾರಿಗಳಿಗೆ ನೀಡುವಂತೆ ತಿಳಿಸಬೇಕು ಎಂದರು.
ಕಡೇಚೂರಿನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದ ಬಗ್ಗೆ ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಕುರಿತು ವ್ಯಾಪಕ ಪ್ರಚಾರ ಮಾಡಿ. ಜಿಲ್ಲೆಯ ಒಟ್ಟು 31 ಐಟಿಐ, 05 ಪಾಲಿಟೆಕ್ನಿಕ್, 01 ಇಂಜಿನಿಯರಿಂಗ್ ಕಾಲೇಜು ಮತ್ತು 71 ಪದವಿ ಕಾಲೇಜುಗಳಿದ್ದು, ಈ ಸಂಸ್ಥೆಗಳಲ್ಲಿ 2022-23ರಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳ ವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಿ ಪ್ರತಿಯೊಬ್ಬರಿಗೂ ದೂರವಾಣಿ ಮೂಲಕ ಸಂಪರ್ಕಿಸಿ, ಯೋಜನೆಯ ಬಗ್ಗೆ ಮಾಹಿತಿ ನೀಡಿ ಯೋಜನೆಯ ನೋಂದಣಿ ಕುರಿತಂತೆ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು.ಅಂಕಪಟ್ಟಿಗಳ ವಿತರಣೆಯಲ್ಲಿ ವಿಳಂಬವಾಗಿತ್ತಿರುವ ದೂರುಗಳು ಕೇಳಿಬರುತ್ತಿದ್ದು, ಈ ಸಮಸ್ಯೆ ಬಗ್ಗೆ ಎಲ್ಲಾ ಕಾಲೇಜಿನ ಪ್ರಾಂಶುಪಾಲರು ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಈ ವೇಳೆ ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ ಜಹೀರ್ ಅಹ್ಮದ್, ಜಿಲ್ಲಾ ಉದ್ಯೋಗಾಧಿಕಾರಿ ಪ್ರಭಾಕರ್ ವಿ., ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಬಸಪ್ಪ ಎಸ್ ತಳವಾಡಿ, ಕಡೇಚೂರ ಜಿಟಿಟಿಸಿ ಪ್ರಾಚಾರ್ಯ ಅನಿಲಕುಮಾರ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ್, ಪ್ರಭಾರಿ ಡಿಡಿಪಿಐ ಬಸನಗೌಡ ಆಲ್ದಾಳ, ಸರಕಾರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ, ಎಲ್‌ಕೆಇಟಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಜಿ.ಎಂ. ವಿಶ್ವಕರ್ಮ ಸೇರಿದಂತೆ ಇತರರಿದ್ದರು.