ಕನ್ನಡಪ್ರಭ ವಾರ್ತೆ, ತುಮಕೂರು

ರಾಜ್ಯದ ಪರಿಶಿಷ್ಟ ಜಾತಿ, ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸಂವಿಧಾನದ ಷಡ್ಯುಲ್ 9ಕ್ಕೆ ಸೇರಿಸುವ ಕುರಿತು ರಾಜ್ಯ ಸರ್ಕಾರ 2023ರಲ್ಲಿಯೇ ಪತ್ರ ಬರೆದು ಒತ್ತಾಯಿಸಿದ್ದರೂ ಇದುವರೆಗೂ ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರ ವಾಗಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಪರಿಶಿಷ್ಟರು ಶೇ.17 ಮತ್ತು ಪರಿಶಿಷ್ಟ ವರ್ಗದವರು ಶೇ.7ರಷ್ಟಿದ್ದು, ನ್ಯಾಯಮೂರ್ತಿ ನಾಗಮೋಹನ್‌ದಾಸ್ ಸಮಿತಿಯ ವರದಿಯ ಅನ್ವಯ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಲ್ಲದೆ, ಇದನ್ನು ಸಂವಿಧಾನದ ಷಡ್ಯೂಲ್ 9ಕ್ಕೆ ಸೇರಿಸುವ ಮೂಲಕ ಪ್ರಶ್ನಾತೀತಗೊಳಿಸಬೇಕೆಂದು ಶಿಫಾರಸ್ಸು ಮಾಡಿದೆ. ಅಲ್ಲದೆ ಅಂದಿನ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ವಂದಿತ ಶರ್ಮ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ತುರ್ತಾಗಿ ಕ್ರಮ ಕೈಗೊಳ್ಳುವಂತೆ 2023ರ ಮಾರ್ಚ 23ರಂದು ಮನವಿ ಮಾಡಿದ್ದಾರೆ. ಮೂರು ವರ್ಷಗಳಿಂದ ಕೇಂದ್ರವಾಗಲಿ, ರಾಜ್ಯವಾಗಲಿ ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ ಶೀಘ್ರವೇ ಎರಡು ಸರ್ಕಾರಗಳು ಈ ಬಗ್ಗೆ ತಮ್ಮ ಸ್ಪಷ್ಟ ನಿಲುವು ಪ್ರಕಟಿಸಬೇಕು. ಇಲ್ಲದಿದ್ದರೆ ಇಡೀ ಸಮುದಾಯ ಹೋರಾಟಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಕಾರ್ಯಾಧ್ಯಕ್ಷ ಎಂ.ನರಸಿಂಹಯ್ಯ, ಖಜಾಂಚಿ ರಾಜಪ್ಪ, ಪ್ರಧಾನ ಕಾರ್ಯದರ್ಶಿ ಜಯಶ್ರೀ ಗುಡ್ಡಕಾಯ,ಉಪಾಧ್ಯಕ್ಷ ರಾಜಣ್ಣ.ಟಿ., ತುಮಕೂರಿನ ಹೆಚ್.ಸಿ.ಹನುಮಂತಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.