ಕನ್ನಡಪ್ರಭ ವಾರ್ತೆ ಬೆಳಗಾವಿಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ ₹60ಕ್ಕೆ ಹೆಚ್ಚಿಸುವುದು ಸೇರಿದಂತೆ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಶನಿವಾರ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ ₹60ಕ್ಕೆ ಹೆಚ್ಚಿಸುವುದು ಸೇರಿದಂತೆ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಶನಿವಾರ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಯಿತು.ನ.30ರಿಂದ ಆರಂಭವಾಗಲಿರುವ ಲೋಕಸಭಾ ಅಧಿವೇಶನದಲ್ಲಿ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರಸ್ತುತ ಇರುವ ₹47ರಿಂದ ₹48ರಿಂದ ₹60ಕ್ಕೆ ಹೆಚ್ಚಿಸಬೇಕು. ವಾಣಿಜ್ಯ ಬಳಕೆಯ ಸಕ್ಕರೆಯ ಬೆಲೆಯನ್ನು ಪ್ರತಿ ಕೆ.ಜಿ.ಗೆ ₹100ಕ್ಕೆ ನಿಗದಿಪಡಿಸಬೇಕು. ಕೇಂದ್ರ ಸರ್ಕಾರದ ಸಕ್ಕರೆ ಆಮದು ನೀತಿಯನ್ನು ಸಂಪೂರ್ಣ ರದ್ದುಗೊಳಿಸಬೇಕು ಹಾಗೂ ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ರೈತ ಸಂಘ ಒತ್ತಾಯಿಸಿದೆ.
ದೇಶವು ಕಬ್ಬು ಹಾಗೂ ಸಕ್ಕರೆ ಉತ್ಪಾದನೆಯಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ದೇಶೀಯ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ. ಹೀಗಿರುವಾಗ ವಿದೇಶಗಳಿಂದ ಸಕ್ಕರೆ ಆಮದು ಮಾಡಿಕೊಳ್ಳುವ ಅಗತ್ಯವೇನಿದೆ ಎಂದು ಸಂಘಟನೆ ಪ್ರಶ್ನಿಸಿದೆ.ಕೇಂದ್ರ ಸರ್ಕಾರದ ಸಕ್ಕರೆ ನೀತಿಯಿಂದ ಕಬ್ಬು ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಕಳೆದ ತಿಂಗಳು ಪ್ರತಿ ಕೆ.ಜಿ.ಗೆ ₹58ರಷ್ಟಿದ್ದ ಸಕ್ಕರೆ ಬೆಲೆ ಇದೀಗ ₹47ರಿಂದ ₹48ಕ್ಕೆ ಕುಸಿದಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹4,350 ದರದಲ್ಲಿ ಬಿಲ್ ಪಾವತಿಸುವುದೂ ಕಾರ್ಖಾನೆಗಳಿಗೆ ಕಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ರೈತರ ಬದುಕು ಹಾಗೂ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಈ ಬೇಡಿಕೆಗಳನ್ನು ಪ್ರಧಾನಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಜಗದೀಶ ಶೆಟ್ಟರ್ ಅವರನ್ನು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಿಶನ್ ನಂದಿ, ಪ್ರೇಮ ಚೌಗಲಾ ಸೇರಿದಂತೆ ಪದಾಧಿಕಾರಿಗಳು ಇದ್ದರು.