ಸಾರಾಂಶ
ಕೃಷ್ಣಾ ನ್ಯಾಯಾಧೀಕರಣದ ಆದೇಶದಂತೆ ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಮಾಡುವುದು ಕರ್ನಾಟಕದ ಹಕ್ಕು ಎಂದು ರಾಜ್ಯದ ಬಿಜೆಪಿ ಸಂಸದರ ನಿಯೋಗ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಮನವರಿಕೆ ಮಾಡಿದೆ.
ನವದೆಹಲಿ: ಕೃಷ್ಣಾ ಮೇಲ್ಮಂಡೆ ಯೋಜನೆ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ಅನವಶ್ಯಕ ಕ್ಯಾತೆ ತೆಗೆಯುತ್ತಿರುವುದು ಖಂಡನೀಯ. ಕೃಷ್ಣಾ ನ್ಯಾಯಾಧೀಕರಣದ ಆದೇಶದಂತೆ ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಮಾಡುವುದು ಕರ್ನಾಟಕದ ಹಕ್ಕು ಎಂದು ರಾಜ್ಯದ ಬಿಜೆಪಿ ಸಂಸದರ ನಿಯೋಗ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಮನವರಿಕೆ ಮಾಡಿದೆ. ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಸಂಸದರು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಆಲಮಟ್ಟಿ ಡ್ಯಾಂ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ್ ಹಾಗೂ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.