ಮತದಾನ ಹೆಚ್ಚಿವುದು ನಮ್ಮೆಲ್ಲರ ಜವಾಬ್ದಾರಿ

| Published : Apr 03 2024, 01:37 AM IST / Updated: Apr 03 2024, 01:38 AM IST

ಸಾರಾಂಶ

ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ನಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ನಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು. ವಿಜಯಪುರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತದಾನದ ಜಾಗೃತಿ ಕುರಿತು ಭಿತ್ತಿ ಪತ್ರಗಳು, ಬ್ಯಾನರ್‌ಗಳು, ಜಿಂಗಲ್ಸ್, ಸೆಲ್ಫಿಸ್ಟ್ಯಾಂಡ್‌ಗಳು ಹಾಗೂ ಇತರೇ ಸಾಮಗ್ರಿಗಳನ್ನು ಹಸ್ತಾಂತರಿಸಿ ಅವರು ಮಾತನಾಡಿ, ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.100ರಷ್ಟು ಮತದಾನ ಗುರಿ ಮುಟ್ಟಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಗ್ರಾಮೀಣ ಮಟ್ಟದಲ್ಲಿ ಅನೇಕ ಜನರು ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ. ಅಂತಹವರನ್ನು ಕರೆ ಮಾಡುವ ಮೂಲಕ ಸಂಪರ್ಕಿಸಿ ಅವರಿಗೂ ಸಹ ಮತದಾನದ ಕುರಿತು ಮಾಹಿತಿ ನೀಡಿ ಮತದಾನದಲ್ಲಿ ಭಾಗಿಯಾಗಲು ಪ್ರೇರೇಪಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸದರಿ ಪ್ರಜಾಪ್ರಭುತ್ವದ ಹಬ್ಬವನ್ನು ನಾವೆಲ್ಲರೂ ಮತದಾನ ಮಾಡುವುದರ ಮೂಲಕ ಸಂಭ್ರಮಿಸೋಣ ಎಂದರು.

ಬಳಿಕ ಜಿ.ಪಂನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಚುನಾವಣಾ ಪರ್ವ ದೇಶದ ಗರ್ವ, ಮತದಾನ ನಮ್ಮೆಲ್ಲರ ಹಕ್ಕು”, “ಮತದಾನ ಮಾಡಿದವನೇ ಮಹಾಶೂರ” ಎಂಬ ಘೋಷಣೆಗಳನ್ನು ಕೂಗಲಾಯಿತು.

ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪಗೋಠೆ, ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಯೋಜನಾ ನಿರ್ದೇಶಕ ಸಿ. ಆರ್.ಮುಂಡರಗಿ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.