ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಬುಧವಾರದಿಂದ ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳಿಗೆ ಅನಿರ್ದಿಷ್ಟಾವಧಿ ಬೀಗ ಬೀಳಲಿದೆ.
ಧಾರವಾಡ:
ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಬುಧವಾರದಿಂದ ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳಿಗೆ ಅನಿರ್ದಿಷ್ಟಾವಧಿ ಬೀಗ ಬೀಳಲಿದೆ. ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದ್ದು, ಇನ್ನು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.ಧಾರವಾಡದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಹಾಗೂ ನೌಕರರ ಹೋರಾಟ ಸಮಿತಿಯಿಂದ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯ ಬಳಿಕ ಮಾತನಾಡಿದ ಸಮಿತಿ ಅಧ್ಯಕ್ಷ ಬಸವರಾಜ ಹೊರಟ್ಟಿ, ಉತ್ತರ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ 22 ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಆದರೆ, ಸರ್ಕಾರ ಮಾತ್ರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದೆ. ಹೀಗಾಗಿ ಬುಧವಾರದಿಂದ ಅನಿರ್ದಿಷ್ಟಾವಧಿ ಶಾಲಾ-ಕಾಲೇಜು ಬಂದ್ ಅನಿವಾರ್ಯವಾಗಿದೆ ಎಂದರು.
ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿ ಉತ್ತರ ಕರ್ನಾಟಕದ ಜನರು ಬೆಂಗಳೂರಿಗೆ ಬರುತ್ತಾರೆ ಎಂದು ಹೇಳುತ್ತಾರೆ. ಹಾಗಾದರೆ ನಮ್ಮ ಭಾಗದ ಜನರು ಏಕೆ ಬೆಂಗಳೂರಿಗೆ ಹೋಗಬೇಕು? ಇಲ್ಲಿಯೇ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ಸರ್ಕಾರ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಬಂದ್ ಖಚಿತ ಎಂದು ಗುಡುಗಿದರು.ಚುನಾವಣಾ ಪ್ರಣಾಳಿಕೆಯಲ್ಲಿ ಎನ್ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ಈಡೇರಿಸಬೇಕು. ಅನುದಾನಿತ ಶಾಲೆಗಳಿಗೂ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಿಕ್ಷಕರು ಮತ್ತೊಮ್ಮೆ ಬೀದಿಗಿಳಿಯುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಬೇಡಿಕೆಗಳನ್ನು ಈಡೇರಿಸಲಿ ಎಂದು ಆಗ್ರಹಿಸಿದರು.
ಕಬ್ಬು ಬೆಳೆಗಾರರು, ಶಿಕ್ಷಕರು ಸೇರಿದಂತೆ ವಿವಿಧ ವರ್ಗದವರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸುತ್ತಿಲ್ಲ. ಕೇಂದ್ರ ಸರ್ಕಾರದತ್ತ ಬೆರಳು ತೋರಿಸುವುದನ್ನು ಬಿಟ್ಟು ರಾಜ್ಯ ಸರ್ಕಾರವೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇನ್ನು ವಿಳಂಬ ಮಾಡಿದರೆ ಹೋರಾಟದ ಬಿಸಿ ಮತ್ತಷ್ಟು ತಟ್ಟಲಿದೆ ಎಂದು ಹೊರಟ್ಟಿ ಎಚ್ಚರಿಸಿದರು.