ಸೆ.9ರಿಂದ ಡಿಸಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ

| Published : Sep 05 2024, 12:34 AM IST

ಸೆ.9ರಿಂದ ಡಿಸಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಸೆ.9ರಿಂದ ಡಿಸಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ

ಕನ್ನಡಪ್ರಭ ವಾರ್ತೆ ರಾಮನಗರ

ವ್ಯಾಪಕ ಭ್ರಷ್ಟಾಚಾರ, ಲಂಚಗುಳಿತ, ರೈತರ ಸಮಸ್ಯೆಯನ್ನು ಬಗೆಹರಿಸದ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಧೋರಣೆ ಖಂಡಿಸಿ ಮತ್ತು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ, ಕನ್ನಡಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳು ಸೆ.9ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿವೆ.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಬುಧವಾರ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ತಮ್ಮ ಬೇಡಿಕೆ ಈಡೆರುವವರೆಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಬೆಂಗಳೂರು ವಿಭಾಗದ ಉಪಾಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಈ ಹಿಂದೆ ಎಲ್ಲಾ ಸಂಘಟನೆಗಳು 24ಗಂಟೆಯ ಗಡುವು ನೀಡಿತ್ತು. ಆದರೆ, ಜಿಲ್ಲಾಡಳಿತ ಈ ಬಗ್ಗೆ ಹೆಚ್ಚು ಗಮನ ನೀಡಲಿಲ್ಲ. ಹಾಗಾಗಿ ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ಧೋರಣೆ ಖಂಡಿಸಿ ಹಾಗೂ 32 ಅಂಶಗಳನ್ನು ಜಾರಿಗೆ ಒತ್ತಾಯಿಸಿ ಸೆ.9ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಧರಣಿ ಸತ್ಯಾಗ್ರಹದಲ್ಲಿ ರೈತ ಸಂಘಟನೆಗಳು, ದಲಿತಪರ, ಕನ್ನಡಪರ ಸಂಘಟನೆಗಳು ಭಾಗಿಯಾಗುತ್ತಿದ್ದು, 500ರಿಂದ 1ಸಾವಿರ ಬಂದಿ ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೇನ್, ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ಆಗಮಿಸಿ ರೈತರ ಕಷ್ಟ ಕೇಳುವ ತನಕ ಈ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದರು.

ಕಳೆದ ಹಲವು ವರ್ಷಗಳಿಂದ ಸತತ ಬರ, ಅಕಾಲಿಕ ಮಳೆಯಿಂದಾಗಿ ರೈತರು ಹೈರಣಾಗಿ ಹೋಗಿದ್ದಾರೆ. ಜಿಲ್ಲೆಯ ಜನರ ಜೀವನಾಡಿ ತೆಂಗು, ರೇಷ್ಮೆ, ಮಾವು,ಹಾಲು ಇವುಗಳ ದರವೂ ಪಾತಾಳಕ್ಕೆ ಕುಸಿದಿದ್ದು, ಜನರು ಜೀವನ ನಡೆಸಲು ಕಷ್ಟಪಡಬೇಕಾದ ಸ್ಥಿತಿ ಇದೆ ಎಂದು ಹೇಳಿದರು.

ರೈತ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷ ಚೀಲೂರು ಮುನಿರಾಜು ಮಾತನಾಡಿ, ಸಮಸ್ಯೆ ಬಗೆಹರಿಸುವಂತೆ ಕೋರಿ ಈಗಾಗಲೇ ರೈತ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಆದರೆ, ಯಾವುದೇ ರೀತಿಯ ಆಡಳಿತ ಸುಧಾರಣೆ ಕಂಡುಬಂದಿಲ್ಲ. ಹಾಗಾಗಿ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಸರಕಾರದ ಉನ್ನತತಾಧಿಕಾರಿಗಳು, ಸಂಬಂಧಪಟ್ಟ ಸಚಿವರು ಆಗಮಿಸಿ, ನಮ್ಮ ಅಹವಾಲು ಆಲಿಸಿ, ಪರಿಹಾರ ಕೊಡುವವರೆಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಜಯಣ್ಣ, ರಾಮಣ್ಣ, ಪುಟ್ಟಸ್ವಾಮಿ ಮತ್ತಿತರರು ಇದ್ದರು.

ಕೋಟ್‌..

ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತದ ಕಚೇರಿಗಳಲ್ಲಿ ಭ್ರಷ್ಟಾಚಾರ ಲಂಚಗುಳಿತನವೂ ರೈತಾಪಿ ವರ್ಗವನ್ನು ಕಂಗೆಡಿಸಿದೆ. ಕಚೇರಿಗಳಲ್ಲಿ ರೈತರು, ಸಾರ್ವಜನಿಕರಿಗೆ ಕೊಡುವ ಎಲ್ಲಾ ಅರ್ಜಿಗಳನ್ನು ನಿಗದಿತವಾಗಿ ಲಂಚ ಕೊಡದೆ ಯಾವ ಕಾರ್ಯವೂ ಆಗುತ್ತಿಲ್ಲ. ಸಣ್ಣಪುಟ್ಟ ಕೆಲಸಕ್ಕೂ ಸಾರ್ವಜನಿಕರು ವರ್ಷಾನುಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. - ಕೆ.ಮಲ್ಲಯ್ಯ, ರೈತ ಸಂಘದ ಮುಖಂಡ.