ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಧರಣಿ

| Published : Jan 21 2025, 12:33 AM IST

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ೧೫-೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ಕೆಲಸ ಮಾಡುವ ದಿನಗೂಲಿ ನೌಕರರಿಗೆ ಯಾವುದೇ ಭದ್ರತೆ ಇಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಅನಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಸೇರಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ನಡೆಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ೧೫-೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಹೊರಗುತ್ತಿಗೆ ಶಿಕ್ಷಕರು ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಗುತ್ತಿಗೆದಾರರು, ವಾರ್ಡನ್‌ರವರು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಿಂಗಳಿಗೆ ಕನಿಷ್ಠ ಮಾಸಿಕ ೩೧ ಸಾವಿರ ರು. ಕೊಡಬೇಕು. ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ದಿನ ರಜೆ ಕೊಡಬೇಕು. ಕೆಲಸದ ಸಮಯ ನಿಗ ಆಗಬೇಕು. ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ.ಕಾರ್ಡ್, ಸರ್ವೀಸ್ ಸರ್ಟಿಫಿಕೇಟ್, ಇಎಸ್‌ಐ ಮತ್ತು ಪಿಎ ಹಣ ತುಂಬಿದ ರಸೀದಿ ಕೊಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. ೫೦ ವಿದ್ಯಾರ್ಥಿಗಳಿಗೆ ೨ ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರಿಯಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಕೆ.ಹನುಮೇಗೌಡ, ನಂಜುಂಡಸ್ವಾಮಿ, ಸಂತೋಷ್, ಮನೋಜ್, ಆಶಾರಾಣಿ, ಶ್ರೆಕಾಂತ್, ಚಿಕ್ಕಣ್ಣ, ನಾಗಮ್ಮ, ಮನೋಜ್, ಸರೋಜ, ಸುಮಿತ್ರ, ಸುಶೀಲ, ಲಕ್ಷ್ಮಿ, ಚಂದ್ರಮ್ಮ, ಅನಸೂಯಮ್ಮ, ಗಂಗಾ, ಶಿವಲಿಂಗಯ್ಯ, ಪಾರ್ವತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.