ಸಾರಾಂಶ
ಕನಕಪುರ: ದೈಹಿಕ ಶಿಕ್ಷಣ ಮುಖ್ಯ ಶಿಕ್ಷಕರ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಪ್ಪ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಪದಾಧಿಕಾರಿಗಳು ಕಳೆದ 17 ವರ್ಷಗಳಿಂದ ನಿರಂತರವಾಗಿ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡುತ್ತಿದ್ದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ಶಿಕ್ಷಣ ಇಲಾಖೆ, ನಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಶಾಲೆಯಲ್ಲಿ ಶಿಕ್ಷಕರ ನಡುವೆ ತಾರತಮ್ಯ, ಅಸಮಾನತೆ ಬೆಳೆಯುತ್ತಿದೆ. ಅಲ್ಲದೆ ದೈಹಿಕ ಶಿಕ್ಷಣ ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುವ ಜೊತೆಗೆ ಅನೇಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.ದೈಹಿಕ ಶಿಕ್ಷಣ ಶಿಕ್ಷಕರು ಸಹ ಶಿಕ್ಷಕರಂತೆ ಪಠ್ಯ ಬೋಧನೆ ಮಾಡಿ ಮೌಲ್ಯಮಾಪನ ಮಾಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರು ಎಂದು ಪರಿಗಣಿಸಿ 2018ರಲ್ಲಿ ವಿಧಾನ ಪರಿಷತ್ ಸದಸ್ಯರ ಭರವಸೆ ಸಮಿತಿ ಸಭೆಯಲ್ಲಿ ಒಪ್ಪಿ ಅನುಮೋದನೆ ನೀಡಲಾಗಿದೆ. ಇದರ ಜೊತೆಗೆ ವೇತನ ನೇಮಕಾತಿ ವಿಧಾನ ಹಾಗೂ ವಿದ್ಯಾರ್ಹತೆಯಲ್ಲಿ ಯಾವುದೇ ವ್ಯತ್ಯಾಸಗಳು ಇರುವುದಿಲ್ಲ. ಆದರೂ ಇಲಾಖೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸಂಘದಿಂದ ಮಾಡಿದ ಮನವಿ ಮೇರೆಗೆ ಸಭಾಪತಿಗಳು ಮತ್ತು ಶಾಲಾ ಶಿಕ್ಷಣ ಸಚಿವರು ಪತ್ರದಂತೆ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯು ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದು ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರಿಂದ ಪರಿಗಣಿಸಿ ಮುಖ್ಯ ಶಿಕ್ಷಕರ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೆ ನೀಡುವ ಬಗ್ಗೆ ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿತ್ತು. ಆದರೂ ಇಲಾಖೆ ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರು ಎಂದು ಪರಿಗಣಿಸಬೇಕು. ಜೊತೆಗೆ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ದೈಹಿಕ ಶಿಕ್ಷಣ ಶಿಕ್ಷಕರಿಗೂ ಮುಖ್ಯ ಶಿಕ್ಷಕರ ಮುಂಬಡ್ತಿಗಳನ್ನು ನೀಡಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ನೇಮಕಾತಿ ಮಾಡಬೇಕು. ಅಲ್ಲಿಯವರೆಗೂ ಅತಿಥಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಮಾಡಬೇಕು. ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಅಥವಾ ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇದ್ದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಅಧಿಕ ಪ್ರಭಾರದಲ್ಲಿರಿಸುವ ಕುರಿತು ಸೂಕ್ತ ಕ್ರಮಗಳನ್ನು ತೆಗೆದು ಕೊಳ್ಳಬೇಕು ದೈಹಿಕ ಶಿಕ್ಷಣ-ಶಿಕ್ಷಕರ ಈ ಎಲ್ಲ ಬೇಡಿಕೆಗಳನ್ನು ಜುಲೈ ಅಂತ್ಯದೊಳಗೆ ಈಡೇರಿಸದಿದ್ದರೆ ಇಲಾಖೆ ವತಿಯಿಂದ ನಡೆಯುವ ಕ್ರೀಡಾಕೂಟಗಳನ್ನು ಬಹಿಷ್ಕರಿಸುವ ಮೂಲಕ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ಮನವಿ ಮೂಲಕ ಶಾಲಾ ಶಿಕ್ಷಣ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.
ತಾಲೂಕು ದೈಹಿಕ ಪರೀವೀಕ್ಷಕ ಸತೀಶ್, ಸಂಘದ ತಾಲೂಕು ಅಧ್ಯಕ್ಷ ರಮೇಶ್, ಗೌರವ ಅಧ್ಯಕ್ಷ ಪ್ರಾನ್ಸಿಸ್ ಚಾರಪ್ಪ, ಉಪಾಧ್ಯಕ್ಷೆ ಜೈಶೀಲ, ಕಾರ್ಯದರ್ಶಿ ಸುರೇಂದ್ರ, ಸಹ ಕಾರ್ಯದರ್ಶಿ ಚಿಕ್ಕವೆಂಕಟ ರಮಣಪ್ಪ, ಖಜಾಂಚಿ ಕೆ.ಟಿ.ಸುರೇಶ್ ಇತರರು ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 01:
ಕನಕಪುರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಕಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.