ಸಕಲೇಶಪುರ: ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬ ನಾಗರಿಕರು ತಿಳಿದುಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಜೀವನ ಹಾಗೂ ಹೋರಾಟವನ್ನು ಅರಿತು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ಸುಭಾಷ್ ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸ್ವಾತಂತ್ರ್ಯವು ಸುಲಭವಾಗಿ ದೊರೆತದ್ದಲ್ಲ. ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಬ್ರಿಟಿಷರು ದೇಶದ ಸಂಪತ್ತನ್ನು ಕೊಳ್ಳೆ ಹೊಡೆದು ಸುಮಾರು 200 ವರ್ಷಗಳ ಕಾಲ ಆಳಿದರು. ಭಗತ್ ಸಿಂಗ್ ಸೇರಿದಂತೆ ಅನೇಕರು ದೇಶಕ್ಕಾಗಿ ತಮ್ಮ ಜೀವನವನ್ನೇ ಅರ್ಪಿಸಿದ್ದಾರೆ. ಇಂತಹ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ದೇಶದ ಇತಿಹಾಸದ ಅರಿವು ಮೂಡಿಸುವ ಜವಾಬ್ದಾರಿ ಶಿಕ್ಷಕರು, ಪೋಷಕರು ಹಾಗೂ ಸಮಾಜದ ಮೇಲಿದೆ ಎಂದರು. ದೇಶ ಮೊದಲು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು. ಸಕಲೇಶಪುರದ ಪ್ರಕೃತಿ ಸೌಂದರ್ಯ ಹಾಗೂ ಪ್ರವಾಸಿತಾಣಗಳನ್ನು ಸಂರಕ್ಷಿಸಿ ತಾಲೂಕನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.ಸರ್ಕಾರಿ ಕಚೇರಿಗಳಿಗೆ ಬರುವ ಸಾಮಾನ್ಯ ಜನರಿಗೆ ಗೌರವಯುತವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಮಾಡಿಕೊಡುವ ವಾತಾವರಣ ನಿರ್ಮಾಣವಾಗಬೇಕು. ಬಡವರು ತಮ್ಮ ದಿನದ ಕೂಲಿಯನ್ನೂ ಲೆಕ್ಕ ಹಾಕಿಕೊಂಡು ಕಚೇರಿಗಳಿಗೆ ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಾರ್ವಜನಿಕರ ಹಿತ ಕಾಪಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯವು ಯಾರೋ ಹೂವಿನ ಬುಟ್ಟಿಯಲ್ಲಿ ತಂದುಕೊಟ್ಟದ್ದಲ್ಲ. ಸುಮಾರು 200 ವರ್ಷಗಳ ಬ್ರಿಟಿಷರ ಶೋಷಣೆ ಹಾಗೂ ದಮನಕಾರಿ ಆಡಳಿತವನ್ನು ದೇಶ ಎದುರಿಸಿತ್ತು. ದಾದಾಭಾಯಿ ನೌರೋಜಿ ಸೇರಿದಂತೆ ಹಲವು ನಾಯಕರು ಬ್ರಿಟಿಷರು ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದ ರೀತಿಯನ್ನು ವಿವರಿಸಿದ್ದರು. ಲಾಲಾ ಲಜಪತ್ ರಾಯ್, ಬಾಲ ಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್ ಸೇರಿದಂತೆ ಅನೇಕ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದರು. ಮಹಾತ್ಮ ಗಾಂಧೀಜಿಯವರ ಅಹಿಂಸೆ ಹಾಗೂ ಸತ್ಯಾಗ್ರಹದ ಮೂಲಕ ಹೋರಾಟಕ್ಕೆ ಹೊಸ ದಿಕ್ಕು ದೊರೆಯಿತು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿ ದೇಶದ ಏಕತೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು ಎಂದರು.ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫಿಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್, ತಹಸೀಲ್ದಾರ್ ಸುಪ್ರೀತ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ, ಶಿರಸ್ತೇದಾರ್ ರವಿ, ಜನಾರ್ದನ್, ಕಂದಾಯ ಇಲಾಖೆಯ ದಾನ್ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.