ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಾದ್ಯಂತ ಶುಕ್ರವಾರ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು, ಶಾಲಾ ಕಾಲೇಜುಗಳಲ್ಲಿ ಸಂಭ್ರಮ ಸಡಗರದಿಂದ 79 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾ ಕಾಲೇಜುಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಮಕ್ಕಳು ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದರು. ಸ್ವಾತಂತ್ರ್ಯ ಸೇನಾನಿಗಳ ವೇಷಭೂಷಣ ಧರಿಸಿ ಗಮನಸೆಳೆದರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಿದ್ದು ದೇಶಪ್ರೇಮ ಸಾರುವ ಏಕಪಾತ್ರಾಭಿನಯ, ನಾಟಕ ಪ್ರದರ್ಶನಗಳನ್ನೂ ಆಯೋಜಿಸಲಾಗಿತ್ತು. ಎಲ್ಲೆಡೆ ತ್ರಿವರ್ಣ ಧ್ವಜಗಳು ರಾರಾಜಿಸಿದವು.
ರಾಜಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋಥ್ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.ಬೆಸ್ಕಾಂ ಕಚೇರಿ ಮುಂಭಾಗ ಆಯೋಜಿಸಿದ್ದ ಸಮಾರಂಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಮುಖ್ಯ ಪ್ರಧಾನ ವ್ಯವಸ್ಥಾಪಕ ಮಾರುತಿ ಯಮನಪ್ಪ ಬೋವಿ ಮತ್ತಿತರರು ಪಾಲ್ಗೊಂಡಿದ್ದರು. ಕುಮಾರಸ್ವಾಮಿ ಬಡಾವಣೆ ನಿವಾಸಿಗಳ ಸಂಘ, ವೃಷಭಾವತಿ ನಗರ ಹಿರಿಯ ನಾಗರೀಕರ ವೇದಿಕೆ, ವಿಶ್ವೇಶ್ವರಯ್ಯ ಲೇಔಟ್ ನಿವಾಸಿಗಳ ಸಂಘ ಸೇರಿದಂತೆ ಹಲವೆಡೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಡತನ ನಿವಾರಣೆಗೆ ಆದ್ಯತೆ ನೀಡಿ: ಬ್ರಿಗೇಡಿಯರ್ ಶಶಿಧರ್ದೇಶದಲ್ಲಿ ಬಡತನದ ಸಂಪೂರ್ಣ ನಿವಾರಣೆ ಹಾಗೂ ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯವಿದೆ ಎಂದು ಸೈನಿಕ ಕಲ್ಯಾಣ ಇಲಾಖೆಯ ನಿವೃತ್ತ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ.ಶಶಿಧರ್ ಪ್ರತಿಪಾದಿಸಿದರು.
ಬೆಂಗಳೂರು ನಗರ ವಿಶ್ವವಿದ್ಯಾನಿಲಯದಿಂದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಬಡತನ ನಿವಾರಣೆಯಾಗಬೇಕು. ಮೌಲ್ಯಾಧಾರಿತ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಬೇಕು. ಆರೋಗ್ಯ ಸೇವೆ ಸುಧಾರಣೆಯಾಗಬೇಕು. ಯುವ ಪೀಳಿಗೆಯಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.