ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲಾಡಳಿತ ವತಿಯಿಂದ ಆ. 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಆಯಾಯ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಯಾವುದೇ ಲೋಪದೋಷಗಳಿಲ್ಲದೆ ನಡೆಸುವಲ್ಲಿ ಎಲ್ಲ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸ್ವಾಗತ, ನಿರೂಪಣೆ, ವೇದಿಕೆ ವ್ಯವಸ್ಥೆ, ಪಥಸಂಚಲನ, ಉಪಹಾರ, ತುರ್ತು ಚಿಕಿತ್ಸೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವಂತೆ ಆಯಾಯ ಸಮಿತಿಗಳಿಗೆ ಅವರು ಸೂಚಿಸಿದರು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಯ ಸಹಕಾರ ತುಂಬ ಅಗತ್ಯವಿದೆ. ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಿರಬೇಕು. ಎಂದು ಅವರು ಸೂಚಿಸಿದರು.
ಇಲಾಖೆಗಳಿಗೆ ವಿದ್ಯುತ್ ಅಲಂಕಾರ ಮಾಡಬೇಕು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉತ್ತಮವಾಗಿ ನಡೆಸುವಂತೆ ಅವರು ಸೂಚಿಸಿದರು. ಒಟ್ಟಾರೆಯಾಗಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವಲ್ಲಿ ಪ್ರತಿಯೊಂದು ಇಲಾಖೆಗಳು ಕೈಜೋಡಿಸಬೇಕು ಎಂದು ಅವರು ಹೇಳಿದರು.ಮಂಗಳೂರು ನೆಹರು ಮೈದಾನದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಬಳಿಕ ಸ್ವಾತಂತ್ರ್ಯ ಸಂದೇಶ ನೀಡಲಿದ್ದಾರೆ. ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಎಸ್ ಜೆ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.