ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಭಾರತದಲ್ಲಿ ಶೇ.೧೨ರಷ್ಟು ಕ್ಯಾಪಿಟಲ್ ಗೂಡ್ಸ್‌ಗಳನ್ನು ಮಾತ್ರ ಉತ್ಪಾದಿಸಲಾಗುತ್ತಿದೆ. ಉಳಿದದ್ದನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ)ಯ ಫೌಂಡೇಶನ್ ಫಾರ್ ಸೈನ್ಸ್, ಇನೋವೇಷನ್ ಅಂಡ್ ಡೆವಲಪ್‌ಮೆಂಟ್‌ನ ಪ್ರೋಗ್ರಾಮ್ ಮ್ಯಾನೇಜರ್ ಪ್ರತಾಪ್ ಮೂರ್ತಿ ತಿಳಿಸಿದರು.ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಆಯೋಜಿಸಿದ್ದ ಮೂರು ದಿನಗಳ ರೊಟೇಟಿಂಗ್ ಮೆಷಿನರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೃಹತ್ ಕೈಗಾರಿಕಾ ಕ್ಷೇತ್ರದಲ್ಲಿ ಆಮದು ಪ್ರಮಾಣ ತಗ್ಗಿಸುವ ಉದ್ದೇಶದಿಂದ ಬೃಹತ್ ಕೈಗಾರಿಕೆಗಳ ಸಚಿವಾಲಯ ಸಾಕಷ್ಟು ಉಪಕ್ರಮಗಳನ್ನು ಕೈಗೆತ್ತಿಕೊಂಡಿದೆ. ತಂತ್ರಜ್ಞಾನ ಮತ್ತು ಮಾನವ ಸಂಪನ್ಮೂಲದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಬೃಹತ್ ಕೈಗಾರಿಕೆಗಳ ಸಚಿವಾಲಯ ಸಮೃದ್ಧಿ ಯೋಜನೆ ಜಾರಿಗೆ ತಂದಿದ್ದು, ಅದರ ಅಡಿಯಲ್ಲಿ ಈ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರಾಂಶುಪಾಲ ಡಾ.ಎ.ಜೆ.ಕೃಷ್ಣಯ್ಯ ಅವರು ಮಾತನಾಡಿ, ಇಂದು ಮೆಕ್ಯಾನಿಕಲ್ ಎಂಜಿನಿಯರ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ರೀತಿಯ ತರಬೇತಿ ಕಾರ್ಯಾಗಾರಗಳು ವೃತ್ತಿಪರ ಕೌಶಲಗಳನ್ನು ಕಲಿಯಲು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದು ಅಭಿಪ್ರಾಯಪಟ್ಟರು.ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಕಾರ್ಯದರ್ಶಿ ಸಿ.ಆರ್.ಜಗದೀಶ್, ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಸ್.ಪ್ರದೀಪ್, ಡೀನ್ ಡಾ.ಕೆ.ಆರ್.ದುಶ್ಯಂತ್ ಕುಮಾರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಜಿಲ್ ವಣ್ಣನ್, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಶಂಕರ್ ಬಾಲಕೃಷ್ಣನ್, ಪವನ್ ರಾಜ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.