ಉನ್ನತ ಸಾಧನೆಯ ಹಾದಿಯಲ್ಲಿ ಭಾರತ

| Published : Dec 01 2024, 01:31 AM IST

ಸಾರಾಂಶ

ಡಿವಿಎಸ್ ರಂಗಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ 2024 ಕಾರ್ಯಕ್ರಮವನ್ನು ಡಾ.ಬಿ.ಜೆ.ಗಿರೀಶ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವೈಜ್ಞಾನಿಕವಾಗಿ ಭಾರತ ಉನ್ನತ ಸಾಧನೆ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಶಂಕರಘಟ್ಟ ಜ್ಞಾನ ಸಹ್ಯಾದ್ರಿಯ ಸ್ನಾತಕೋತ್ತರ ಗಣಿತಶಾಸ್ತ್ರ ಮತ್ತು ಸಂಶೋಧನ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಬಿ.ಜೆ.ಗಿರೀಶ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ 2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವದ ವಿಜ್ಞಾನ 400 ವರ್ಷಗಳಿಗೆ ಸೀಮಿತವಾಗಿದ್ದರೆ, ನಮ್ಮ ಭಾರತದ ವಿಜ್ಞಾನ 4 ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಗಣಿತ ವಿಭಾಗದಲ್ಲಿ ನಮ್ಮ ಭಾರತೀಯರು ಅತಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಪ್ರಾಚೀನವಾದ ಗಣಿತಶಾಸ್ತ್ರ ಇಂದು ವಿಶ್ವದಲ್ಲೇ ಅಗ್ರಗಣ್ಯವಾಗಿದೆ. ವಿಜ್ಞಾನ ಮತ್ತು ಕ್ಷೇತ್ರದಲ್ಲಿ ಪ್ರಾಚೀನ ಕಾಲದಿಂದಲೂ ಅತ್ಯಂತ ಶ್ರೇಷ್ಠ ಸಾಧನೆ ಮಾಡಿದ್ದೇವೆ. ವಿದ್ಯಾರ್ಥಿಗಳು ಇದನ್ನು ಪರಿಗಣಿಸಿ ಅತ್ಯಂತ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಸಂಸ್ಥೆ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದು, ಉನ್ನತ ಸಾಧನೆ ಮಾಡುವ ಗುರಿ ಹೊಂದಬೇಕು. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶ ಹಾಗೂ ವೇದಿಕೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ.ಎಂ.ವೆಂಕಟೇಶ್ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ನೂರಕ್ಕೂ ಅಧಿಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ನಗದು ಬಹುಮಾನ ಸಹ ನೀಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್, ಐಕ್ಯೂಎಸಿ ಸಂಚಾಲಕ ಪ್ರೊ.ಎನ್‌.ಕುಮಾರಸ್ವಾಮಿ, ಪ್ರತಿಭಾ ಪುರಸ್ಕಾರ ಸಮಿತಿ ಸಂಚಾಲಕ ಪ್ರೊ.ಎಸ್‌.ಡಿ.ಉಮೇಶ್‌ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.