ಭಾರತದ ಸಂವಿಧಾನ ಇಡೀ ಜಗತ್ತಿನಲ್ಲಿಯೇ ಶ್ರೇಷ್ಠ: ರಾಹುಲ್ ಸಂಕನೂರ

| Published : Feb 10 2024, 01:45 AM IST

ಭಾರತದ ಸಂವಿಧಾನ ಇಡೀ ಜಗತ್ತಿನಲ್ಲಿಯೇ ಶ್ರೇಷ್ಠ: ರಾಹುಲ್ ಸಂಕನೂರ
Share this Article
  • FB
  • TW
  • Linkdin
  • Email

ಸಾರಾಂಶ

ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.

ಬಳ್ಳಾರಿ: ಸಂವಿಧಾನದ ಮೌಲ್ಯ, ಆಶಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಸಂವಿಧಾನ ಅಂಗೀಕಾರಗೊಂಡು 75ನೇ ವರ್ಷ ಪ್ರಯುಕ್ತ ‘ಸಂವಿಧಾನ ಜಾಗೃತಿ ಜಾಥಾ’ ಅಂಗವಾಗಿ ಹಮ್ಮಿಕೊಂಡಿದ್ದ ಐತಿಹಾಸಿಕ ಬಳ್ಳಾರಿ ಬೆಟ್ಟ ಹತ್ತುವ ಸಂವಿಧಾನ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.

ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಸಂವಿಧಾನದ ತತ್ವಾದರ್ಶಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂವಿಧಾನ ಕುರಿತ ಅರಿವು ಹೊಂದಬೇಕು. ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಸಲುವಾಗಿ ಅಧಿಕಾರಿಗಳು, ವಿದ್ಯಾರ್ಥಿಗಳೊಂದಿಗೆ ನಗರದ ಐತಿಹಾಸಿಕ ಪ್ರಸಿದ್ಧ ಏಕಶಿಲಾ ಬೆಟ್ಟ ಹತ್ತುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಸುರಕ್ಷಿತವಾಗಿ ಬೆಟ್ಟ ಹತ್ತಿ, ಇಳಿಯಬೇಕು ಎಂದರು.

ಎಡಿಸಿ ಮಹಮ್ಮದ್ ಝುಬೇರ್ ಮಾತನಾಡಿ, ಸಂವಿಧಾನ ಮೌಲ್ಯ ಮತ್ತು ಆದರ್ಶಗಳನ್ನು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಪಸರಿಸುವ ಕಾರ್ಯವಾಗಬೇಕಿದೆ ಎಂದರು.

ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡ ನಡಿಗೆಯು ಬೆಟ್ಟದ ತುತ್ತ ತುದಿ ತಲುಪಿ, ಬಲೂನ್‍ಗಳನ್ನು ಹಾರಿಸಿ ಸಂಭ್ರಮಿಸುವ ಮೂಲಕ ಸಂವಿಧಾನ ಜಾಗೃತಿ ನಡಿಗೆಗೆ ಮೆರುಗು ತಂದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಕೆ.ಎಚ್. ಅವರು ಸಂವಿಧಾನ ಜಾಗೃತಿ ಕುರಿತ ಗೀತೆಗಳನ್ನು ಹೇಳಿದರು.

ಸಂವಿಧಾನ ನಡಿಗೆ ಅಂಗವಾಗಿ ಬೆಟ್ಟ ಹತ್ತುವ ಕೆಳತುದಿಯಲ್ಲಿ ರಂಗೋಲಿಯಲ್ಲಿ ಅರಳಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ರೂಪ, ಸಂವಿಧಾನ ಪೀಠಿಕೆ, ಅಶೋಕ ಚಕ್ರ, ಸಂಸತ್ ಭವನ ಹಾಗೂ ನಮ್ಮ ಸಂವಿಧಾನ ಎಂದು ಬಿಡಿಸಿದ ರಂಗೋಲಿಯು ಆಕರ್ಷಣೆಯಾಗಿತ್ತು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸತೀಶ್ ಕೆ.ಎಚ್., ಅಬಕಾರಿ ಉಪ ಆಯುಕ್ತ ಮಂಜುನಾಥ, ಡಿಎಚ್‌ಒ ಡಾ. ವೈ. ರಮೇಶ್ ಬಾಬು, ಬಿಸಿಎಂ ಇಲಾಖೆ ಅಧಿಕಾರಿ ಜಲಾಲಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಮತಾ ಪಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ, ರೆಡ್‍ಕ್ರಾಸ್ ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.