ಭಾರತೀಯ ಸಂವಿಧಾನ ವಿಶ್ವಕ್ಕೆ ಶ್ರೇಷ್ಠ: ಶಾಸಕ ಹಂಪನಗೌಡ ಬಾದರ್ಲಿ

| Published : Jan 27 2024, 01:18 AM IST

ಸಾರಾಂಶ

ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು

ಕನ್ನಡಪ್ರಭ ವಾರ್ತೆ ಸಿಂಧನೂರು

ಅಂಬೇಡ್ಕರ್ ರಚಿಸಿರುವ ಭಾರತ ಸಂವಿಧಾನವು ವಿಶ್ವದಲ್ಲಿ ಶ್ರೇಷ್ಠ ಮತ್ತು ಮಾದರಿಯಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಕುಷ್ಟಗಿ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಂವಿಧಾನದ ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳು ಸಾರ್ವಕಾಲಿಕ ದಾಖಲೆಯಾಗಿದೆ. ಅದನ್ನರಿತು ನಾವೆಲ್ಲರೂ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ, ಸಾಮಾನ್ಯ ವ್ಯಕ್ತಿಗಳು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಅಂತಹ ಉನ್ನತ ಸ್ಥಾನಕ್ಕೇರಲು ಸಂವಿಧಾನವೇ ಕಾರಣವಾಗಿದ್ದು, ಆದ್ದರಿಂದಲೇ ಪ್ರತಿಯೊಬ್ಬರ ಭಾರತೀಯರಿಗೆ ಜೀವನಾಡಿ ಮತ್ತು ದಾರಿದೀಪವಾಗಿದೆ ಎಂದು ವಿವರಿಸಿದರು.

ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಮಾತನಾಡಿದರು. ಇದೇ ವೇಳೆ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಾಲೂಕಾಡಳಿತದಿಂದ ಸನ್ಮಾನಿಸಿ, ಅಭಿನಂದನಾ ಪತ್ರ ನೀಡಲಾಯಿತು. ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಡಿವೈಎಸ್ಪಿ ಬಿ.ಎಸ್.ತಳವಾರ, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸ್ವಾಗತಿಸಿದರು. ಸಂಕೇತ ಪ್ರೌಢ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತಗೀತೆ ಹಾಡಿದರು. ಶಿಕ್ಷಕ ವೀರೇಶ ಗೋನವಾರ ನಿರೂಪಿಸಿದರು.