ಹೆಬ್ರಿ ತಾಲೂಕಿನ ಶಿವಪುರ ಗ್ರಾಪಂ ವ್ಯಾಪ್ತಿಯ ಕೆರೆಬೆಟ್ಟು, ಶಿವಪುರ ಹಾಗೂ ಬ್ರಹ್ಮಾವರ ತಾಲೂಕಿನ ಕಕ್ಕುಜೆ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಪ್ರಸ್ತಾಪಿಸಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಯೋಜನೆ ಕೈಬಿಡಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಕಾರ್ಕಳ: ಹೆಬ್ರಿ ತಾಲೂಕಿನ ಶಿವಪುರ ಗ್ರಾಪಂ ವ್ಯಾಪ್ತಿಯ ಕೆರೆಬೆಟ್ಟು, ಶಿವಪುರ ಹಾಗೂ ಬ್ರಹ್ಮಾವರ ತಾಲೂಕಿನ ಕಕ್ಕುಜೆ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಪ್ರಸ್ತಾಪಿಸಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಯೋಜನೆ ಕೈಬಿಡಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಅವರು ಶನಿವಾರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದು, ಇಲ್ಲಿನ 390 ಭೂಮಾಲೀಕರ ಸುಮಾರು 263.49 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಕ್ಕೆ ಭೂಮಾಲೀಕರಿಗೆ ನೋಟಿಸ್ ಜಾರಿಗೊಳಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಸ್ಥಳೀಯ ಗ್ರಾಪಂ, ತಾಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರ ಗಮನಕ್ಕೂ ಯಾವುದೇ ಪೂರ್ವ ಮಾಹಿತಿ ನೀಡದೆ, ಸ್ಥಳೀಯ ಜನಪ್ರತಿನಿಧಿಗಳು, ರೈತರು ಮತ್ತು ಭೂಮಾಲೀಕರೊಂದಿಗೆ ಸಮಾಲೋಚನೆ ನಡೆಸದೆ ಏಕಾಏಕಿ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಶಿವಪುರ–ಕೆರೆಬೆಟ್ಟು ಕೈಗಾರಿಕಾ ಪ್ರದೇಶಾಭಿವೃದ್ಧಿ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಸುನಿಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರನ್ನು ಒತ್ತಾಯಿಸಿದ್ದಾರೆ.