ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ:
ಪ್ರಸಕ್ತ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಅಗತ್ಯ ಸೌಲಭ್ಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರು, ರ್ಯಾಂಪ್, ವಿಶ್ರಾಂತಿ ಕೊಠಡಿ, ಶಾಮಿಯಾನ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇತರೆ ವ್ಯವಸ್ಥೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡುವುದು ಅಗತ್ಯ ಎಂದು ಸೂಚಿಸಿದರು.
ಮುಖ್ಯವಾಗಿ ವಿಶೇಷ ಚೇತನರಿಗೆ, ಹಿರಿಯ ನಾಗರಿಕರಿಗೆ ಹಾಗೂ ತೃತೀಯ ಲಿಂಗಿ ಮತದಾರರು ಮತಗಟ್ಟೆಗೆ ತೆರಳಿ ಸುಸೂತ್ರವಾಗಿ ಮತದಾನ ಮಾಡಲು ಸೌಲಭ್ಯ ಕಲ್ಪಿಸಬೇಕು. ಅಂಬುಲೆನ್ಸ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿಯೋಜನೆ ಹಾಗೂ ಒಆರ್ಎಸ್ ಪಾಕೇಟ್ ಕಲ್ಪಿಸಿರುವ ಬಗ್ಗೆ ಮನವರಿಕೆ ತಿಳಿಸಬೇಕು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾದ ವಿವಿಧ ಚಟುವಟಿಕೆಗನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದರು.ಕಡಿಮೆ ಮತದಾನ ದಾಖಲಾಗಿರುವ ಜಿಲ್ಲೆಯ ಬೀಳಗಿ ಮತ್ತು ಬಾಗಲಕೋಟೆ ಮತಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಸೌಲಭ್ಯ, ರಂಗು ರಂಗಿನ ಚಿತ್ತಾರ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದ್ದು, ಈ ಬಾರಿ ಹೆಚ್ಚಿನ ಮತದಾನದ ಬಗ್ಗೆ ಗಮನಹರಿಸಲಾಗಿದೆ. ಈ ನಿಟ್ಟಿನಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಚಿತ್ರಕಲೆ ಬಿಡಿಸುವ ಮೂಲಕ ಮತದಾರರನ್ನು ಸೆಳೆಯುವಂತೆ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಶಶಿಧರ ಕುರೇರ ತಿಳಿಸಿದರು.ಜಿಲ್ಲೆಯ ಪ್ರತಿಯೊಂದು ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗುತ್ತಿರುವ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಆ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಯೋಜನಾ ನಿರ್ದೇಶಕ ಶಶಿಕಾಂತ ಶಿವಪೂರೆ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರಾದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.(ಪೋಟೊ2 ಬಿಕೆಟಿ 6,: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರೊಂದಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸಭೆ ನಡೆಸಿದರು.ಕೋಟ್ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾದ ಹಿನ್ನಲೆಯಲ್ಲಿ ಮತಗಟ್ಟೆಗಳಲ್ಲಿ ಮತದಾರರು ಪಡೆಯಲು ವಿಶ್ರಾಂತಿ ಕೊಠಡಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿಶ್ರಾಂತಿ ಕೊಠಡಿ ಲಭ್ಯವಿರದಿದ್ದಲ್ಲಿ ಶಾಮಿಯಾನ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗುತ್ತಿದೆ.ಅಲ್ಲದೇ, ವೈದ್ಯಕೀಯ ಸೌಲಭ್ಯ ಹಾಗೂ ಒಆರ್ಎಸ್ ಪಾಕೇಟ್ಗಳನ್ನು ವಿತರಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ.
ಜಾನಕಿ.ಕೆ.ಎಂ, ಜಿಲ್ಲಾ ಚುನಾವಣಾಧಿಕಾರಿ