ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರಸರ್ಕಾರದ ಸವಲತ್ತುಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಾಪಂ ಆಡಳಿತಾಧಿಕಾರಿ ಕೆ.ಬಿ. ಪ್ರಭುಸ್ವಾಮಿ ಹೇಳಿದರು.ಪಟ್ಟಣದ ತಾಪಂ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ಅನುಷ್ಠಾನದ ವಿಚಾರದಲ್ಲಿ ಯಾವುದೇ ತೊಡಕುಗಳಿದ್ದರೂ ನನ್ನ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದರು.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳುವಾಗ ಆದ್ಯತೆ ಮತ್ತು ಅವಶ್ಯಕತೆಗೆ ಹೆಚ್ಚು ಗಮನ ನೀಡಬೇಕೆಂದು ಸೂಚನೆ ನೀಡಿದ ಅವರು, ತುರ್ತು ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.ಕೃಷಿ ಇಲಾಖೆಯ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಂಡು ರೈತರೊಂದಿಗೆ ನಿರಂತರ ಸಂಪರ್ಕದಲಿದ್ದು, ಅವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಿ ಅಗತ್ಯ ಮಾರ್ಗದರ್ಶನ ನೀಡಬೇಕೆಂದರಲ್ಲದೆ, ಸಾಲಿಗ್ರಾಮ ಮತ್ತು ಕೆ.ಆರ್. ನಗರ ತಾಲೂಕು ವ್ಯಾಪ್ತಿಯ ಹೋಬಳಿ ಕೇಂದ್ರಗಳಲ್ಲಿ ಇರುವ ರೈತ ಉತ್ಪಾದಕ ಸಂಸ್ಥೆಗಳ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕೆಂದರು.ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಶೇ. 60ಕ್ಕಿಂತ ಕಡಿಮೆ ಇದ್ದು, ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಅದು 100 ರಷ್ಠು ಇರುವಂತೆ ನೋಡಿಕೊಳ್ಳಬೇಕೆಂದರಲ್ಲದೆ, ಅವರ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆಯೂ ನಿಗಾ ವಹಿಸುವಂತೆ ಆದೇಶಿಸಿದರು.ಎಲ್ಲ ಪಂಚಾಯಿತಿಗಳ ಪಿಡಿಒಗಳು ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಆಹಾರದ ಗುಣಮಟ್ಟ ಪರಿಶೀಲನೆ ಮಾಡಿ ಅಲ್ಲಿಯೇ ಭೋಜನ ಸವಿಯಬೇಕೆಂದು ಹೇಳಿದ ಅವರು ಇದನ್ನು ದಾಖಲೆ ಪುಸ್ತಕದಲ್ಲಿ ನಮೂದಿಸಬೇಕೆಂದು ನುಡಿದರು.ಗ್ರಾಪಂ ಪಿಡಿಒಗಳು ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿ ಉಚಿತವಾಗಿ ಬೋಧನೆ ಮಾಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚುವಂತೆ ನೋಡಿಕೊಳ್ಳುವ ನಿರ್ಧಾರ ಮಾಡಿದ್ದು, ಇದು ಉತ್ತಮ ಕೆಲಸವಾಗಿದ್ದು, ನಾವೆಲ್ಲರೂ ಅವರನ್ನು ಬೆಂಬಲಿಸಿ ಪ್ರೋತ್ಸಾಹಿಸಬೇಕೆಂದರು.ತಾಪಂ ಇಒ ವಿ.ಪಿ. ಕುಲದೀಪ್, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಮಲ್ಲಿಕಾರ್ಜುನ, ಸಿಡಿಪಿಒ ಸಿ.ಎಂ. ಅಣ್ಣಯ್ಯ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಿಡಿಒಗಳು ಇದ್ದರು.